ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯ ಸರ್ಕಾರಕ್ಕೆ ಶೀಘ್ರವೇ ವರದಿ ಸಲ್ಲಿಕೆ’

ಆರೋಗ್ಯ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ
Last Updated 9 ಏಪ್ರಿಲ್ 2020, 15:51 IST
ಅಕ್ಷರ ಗಾತ್ರ

ಯಾದಗಿರಿ: ಯಾದಗಿರಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಬಳಿಚಕ್ರ ಹಾಗೂ ಕೌಳೂರ ಗ್ರಾಮಗಳಿಗೆ ಬುಧವಾರ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಅವರು ಜಂಟಿಯಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಕೊರೊನಾ ಸೋಂಕು ಬಗ್ಗೆ ಮಾಹಿತಿ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಯಾವುದೇ ರೀತಿಯ ಚಿಕಿತ್ಸೆ ನೀಡುವ ವಾತಾವರಣ ಇರಲಿಲ್ಲ ಮತ್ತು ವೈದ್ಯರೂ ಇರಲಿಲ್ಲ. ಒಬ್ಬರು ಮಾತ್ರ ನರ್ಸ್ ಇದ್ದರು. ಅಲ್ಲದೆ, ಬಳಿಚಕ್ರ ಗ್ರಾಮದಲ್ಲಿ ಬೆಂಗಳೂರಿನಿಂದ ಬಂದ ನೂರಾರು ಕಟ್ಟಡ ಕಾರ್ಮಿಕರು ಗುಂಪುಗುಂಪಾಗಿ ಕೂತಿದ್ದರು. ಅವರಿಗೆ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿ ಮನೆಗೆ ಕಳುಹಿಸಲಾಯಿತು ಹಾಗೂ ರಸ್ತೆ ಕಾಮಗಾರಿಗಾಗಿ ನೂರಾರು ಕಾರ್ಮಿಕರು ಇರುವ ಬಗ್ಗೆ ಮಾಹಿತಿ ಪಡೆದು ಆ ಸ್ಥಳಕ್ಕೆ ಭೇಟಿ ನೀಡಲಾಯಿತು.

ಕಾಮಗಾರಿ ಮಾಡಿಸುವ ಗುತ್ತಿಗೆದಾರ ಎಲ್ಲಾ ರೀತಿಯ ಸೌಲಭ್ಯ ಒದಗಿಸಿದ್ದಾರೆಯೇ ಎಂದು ವಿಚಾರಿಸಿ, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನ್ಯಾಯಾಧೀಶರು ಸಲಹೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಸುದೀರ್ಘ ವರದಿಯನ್ನು ರಾಜ್ಯಕ್ಕೆ ಮಾಹಿತಿ ನೀಡಲಾಗಿದೆ. ಕಳೆದ ಒಂದು ವಾರದಿಂದ ಯಾದಗಿರಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕೊರೊನಾ ಸೋಂಕು ಬಗ್ಗೆ ವ್ಯಾಪಕವಾಗಿ ಪ್ರಚಾರ ಮಾಡಲಾಗುತ್ತಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೊಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT