ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸೌಲಭ್ಯ ನೀಡದೆ ಕೆಲಸ ಮಾಡಲು ಸೂಚನೆ’

ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
Published : 26 ಸೆಪ್ಟೆಂಬರ್ 2024, 14:50 IST
Last Updated : 26 ಸೆಪ್ಟೆಂಬರ್ 2024, 14:50 IST
ಫಾಲೋ ಮಾಡಿ
Comments

ಸುರಪುರ: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಲೇಖನ ಸ್ಥಗಿತಗೊಳಿಸಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಸಂಘದ ಅಧ್ಯಕ್ಷ ರವಿ ಓ.ಎಚ್. ಮಾತನಾಡಿ, ‘ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಲೇಖನ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಅಭಿವೃದ್ಧಿಪಡಿಸಿರುವ ಅಂದಾಜು 17ಕ್ಕೂ ಅಧಿಕ ಮೊಬೈಲ್-ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ತಂತ್ರಾಂಶಗಳ ನಿರ್ವಹಣೆಗೆ ಅಗತ್ಯವಿರುವ ಮೊಬೈಲ್, ಲ್ಯಾಪ್‌ಟಾಪ್, ಸ್ಕಾನರ್ ಒದಗಿಸದೆ ಕರ್ತವ್ಯ ನಿರ್ವಹಿಸಲು ಸೂಚಿಸಲಾಗುತ್ತದೆ. ಕ್ಷೇತ್ರ ಮಟ್ಟದ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವುದು ಸಾಧ್ಯವಾಗುತ್ತಿಲ್ಲ. ಮೊಬೈಲ್‍ಗಳಲ್ಲಿ ಏಕಕಾಲಕ್ಕೆ ಪ್ರಗತಿ ಸಾಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆಯುತ್ತಿವೆ. ಇದರಿಂದ ಮಾನಸಿಕ ಮತ್ತು ದೈಹಿಕ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ’ ಎಂದು ದೂರಿದರು.

‘ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ 1-5 ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಯಾಪ್ ಸೇರಿದಂತೆ ವಿವಿಧ ಮೂಲಸೌಲಭ್ಯಗಳನ್ನು ಒದಗಿಸಬೇಕು. ಮೊಬೈಲ್ ತಂತ್ರಾಂಶಗಳ ಕೆಲಸದ ಹಿನ್ನೆಲೆಯಲ್ಲಿ ಆಗಿರುವ ಎಲ್ಲಾ ಅಮಾನತುಗಳನ್ನು ರದ್ದುಪಡಿಸಬೇಕು. ಪ್ರಯಾಣ ಭತ್ಯೆ ದರವನ್ನು 500 ರಿಂದ ₹3 ಸಾವಿರಕ್ಕೆ ಹೆಚ್ಚಿಸಬೇಕು. ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ನಿಷೇಧಿಸಬೇಕು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು. 30 ವರ್ಷ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಅಂಚಿನಲ್ಲಿರುವ ರಾಜ್ಯದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯಿತಿ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಬೇಕು’ ಎಂದು ಒತ್ತಾಯಿಸಿದರು.

‘ರಾಜಸ್ವ ನಿರೀಕ್ಷಕರನ್ನು ಪ್ರಥಮ ದರ್ಜೆ ಸಹಾಯಕರನ್ನಾಗಿ ಮಾಡಿ ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರಿಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿ ನೀಡಬೇಕು. ಕಂದಾಯ ಇಲಾಖೆಯ 3 ವರ್ಗಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು. ಆಯುಕ್ತಾಲಯದಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

ಮನವಿ ಪತ್ರವನ್ನು ತಹಶೀಲ್ದಾರ್ ಎಚ್.ಎ. ಸರಕಾವಸ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.

ಗ್ರಾಮ ಆಡಳಿತ ಅಧಿಕಾರಿಗಳಾದ ದುಷ್ಯಂತ, ಬಸವರಾಜ ಬೋರಗಿ, ಮಲ್ಲಮ್ಮ, ಸಾವಿತ್ರಿ, ಸುಮಂಗಲಾ, ಹನುಮಂತ, ಶರಣು, ರಾಜೇಸಾಬ್, ನಟರಾಜ್, ಸಂತೋಷ್, ಪ್ರತಾಪ್, ವಿಜಯ, ಬಸವರಾಜ ಶೆಟ್ಟಿ, ಮಹೇಶ ಸಜ್ಜನ್, ಅಭಿಷೇಕ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT