ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸಿ’

ಲೋಕಸಭಾ ಚುನಾವಣೆ: ಎರಡನೇ ಹಂತದ ಸ್ವೀಪ್ ಸಮಿತಿ ಸಭೆಯಲ್ಲಿ ಸಿಇಒ ಹೇಳಿಕೆ
Last Updated 19 ಮಾರ್ಚ್ 2019, 15:16 IST
ಅಕ್ಷರ ಗಾತ್ರ

ಯಾದಗಿರಿ:‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಗ್ರಾಮಗಳಲ್ಲಿ, ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿರುವ ಗ್ರಾಮಗಳಲ್ಲಿ ಹಾಗೂ ಮತದಾನ ಕೇಂದ್ರಗಳಿಂದ ದೂರ ಇರುವ ಗ್ರಾಮಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ 2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಎರಡನೇ ಹಂತದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮೊದಲನೇ ಹಂತದಲ್ಲಿ ಅನುಸರಿಸಿದಂತೆ ಬಾಕಿ ಉಳಿದಿರುವ ಗ್ರಾಮಗಳನ್ನು ಎರಡನೇ ಹಂತದಲ್ಲಿ 40 ಸ್ವೀಪ್ ಕಾರ್ಯಕ್ರಮಗಳನ್ನು ಮಾರ್ಚ್ 23ರಿಂದ ಹಮ್ಮಿಕೊಂಡು ಏಪ್ರಿಲ್ 10 ರೊಳಗೆ ಪೂರ್ಣಗೊಳಿಸಬೇಕು. ಕಾರ್ಯಕ್ರಮ ನೀಡುವ ಕಲಾ ತಂಡದ 6 ಜನ ಸದಸ್ಯರಲ್ಲಿ 2ರಿಂದ 3 ಜನ ಮಹಿಳಾ ಕಲಾವಿದರು ಇರಬೇಕು. ಯಾವುದಾದರೂ ಜಿಲ್ಲೆಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ನೀಡಿರುವ ಅನುಭವ ಇರುವಂತೆ ನೋಡಿಕೊಳ್ಳಬೇಕು’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನಿರ್ದೇಶಿಸಿದರು.

‘ಕಲಾ ತಂಡಗಳು ಬೀದಿ ನಾಟಕ, ಚುನಾವಣೆಗೆ ಸಂಬಂಧಿಸಿದ ಗಾಯನದ ಮೂಲಕ 18ವರ್ಷ ತುಂಬಿದವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ನೋಂದಣಿಯಾಗಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಕುರಿತು ಪರಿಶೀಲಿಸಿಕೊಳ್ಳಬೇಕು ಹಾಗೂ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.

‘ಖ್ಯಾತ ಕಲಾವಿದರಾದ ಬಸವರಾಜ ಮಹಾಮನಿ ಅವರನ್ನು ಜಿಲ್ಲೆಯ ಚುನಾವಣಾ ರಾಯಭಾರಿ ಎಂದು ಆಯ್ಕೆ ಮಾಡಲಾಗಿದ್ದು, ಅವರು ಹೋಬಳಿಗೆ ಒಂದರಂತೆ 16 ಕಾರ್ಯಕ್ರಮಗಳನ್ನು ನೀಡುವರು. ಸುರಪುರ ತಾಲ್ಲೂಕಿನ ನೀಲಕಂಠರಾಯನ ಗಡ್ಡಿಯ ಜನರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ 10ರಿಂದ 12 ದಿನ ಆಟೋದಲ್ಲಿ ಬ್ಯಾನರ್ ಹಾಗೂ ಧ್ವನಿವರ್ಧಕ ಅಳವಡಿಸಿ ಪ್ರತಿ ದಿನ ಬೆಳಿಗ್ಗೆ 8ರಿಂದ ಸಂಜೆ 6 ರವರೆಗೆ ಜನರಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ನಗರ ಪ್ರದೇಶಗಳಲ್ಲಿ ಕಸ ವಿಲೇವಾರಿ ಮಾಡುವ ವಾಹನಗಳಲ್ಲೇ ಸಮಯದ ಹೊಂದಾಣಿಕೆ ಮಾಡಿಕೊಂಡು ಪ್ರಚಾರ ಮಾಡಬೇಕು. ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ, ಸಂತೆ, ಜಾತ್ರೆ ಹಾಗೂ ಜನದಟ್ಟಣೆಯ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲಿ ವೀಲ್ ಚೇರ್, ರ್‍್ಯಾಂಪ್ ವ್ಯವಸ್ಥೆ, ಕಣ್ಣು ಕಾಣದವರಿಗೆ, ನಡೆಯಲು ಬಾರದವರಿಗೆ ಹಾಗೂ ಹಿರಿಯ ನಾಗರಿಕರಿಗೆ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸುವಂತೆ ಮಾಡಲು ಅವರಿಗೆ ವಾಹನದ ಸೌಕರ್ಯ ಮಾಡುವಂತೆ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರು, ವನಜಾಕ್ಷಿ ಬೆಂಡಿಗೆರೆ, ಪಿ.ಥಾಮಸ್, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ, ನೈಸರ್ಗಿಕ ಸಂಪನ್ಮೂಲಗಳ ದತ್ತಾಂಶ ನಿರ್ವಹಣಾ ಕೇಂದ್ರದ ಅಧಿಕಾರಿ ಸಿದ್ಧಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT