ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಭೂ ಸುಧಾರಣೆ ಕ್ರಾಂತಿಕಾರಕ: ಸೋಮನಾಳ

ಜಿಲ್ಲೆಯ ವಿವಿಧೆಡೆ ಡಿ.ದೇವರಾಜ ಅರಸು 106ನೇ ಜನ್ಮದಿನಾಚರಣೆ
Last Updated 21 ಆಗಸ್ಟ್ 2021, 1:14 IST
ಅಕ್ಷರ ಗಾತ್ರ

ಯಾದಗಿರಿ: ಡಿ.ದೇವರಾಜ ಅರಸು ಅವರ ಮೌಲ್ಯಗಳನ್ನು ಇಂದಿನ ಪೀಳಿಗೆ ಪಕ್ಷಾತೀತವಾಗಿ ಅಳವಡಿಸಿಕೊಂಡು ಕಾರ್ಯರೂಪಕ್ಕೆ ತಂದಾಗ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ. ಸರ್ವರಿಗೂ ಸಮಬಾಳು-ಸಮಪಾಲು ಎಂದು ಹಗಲಿರುಳು ಶ್ರಮಿಸಿದ ಧೀಮಂತ ನಾಯಕ ಅವರಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸುರವರ 106 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಅರಸುರವರು 1952 ರಲ್ಲಿ ರಾಜಕೀಯ ಪ್ರವೇಶಿಸಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವು ಸುಧಾರಣೆಗಳನ್ನು ಜಾರಿಗೆ ತಂದು ಜನಮನದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಹಿಂದುಳಿದ ವರ್ಗದವರನ್ನು ಗುರುತಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗಾಗಿ 1972 ರಲ್ಲಿ ಖ್ಯಾತ ವಕೀಲ ಎಲ್.ಜಿ.ಹಾವನೂರ ಅಧ್ಯಕ್ಷತೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆಯುವಂತೆ ಮಾಡಿದರು. 1973 ನವೆಂಬರ್ 1 ರಂದು ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿದರು ಎಂದು ಸ್ಮರಿಸಿದರು.

1974 ರಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಉಳುವವನನ್ನು ಹೊಲದೊಡೆಯನನ್ನಾಗಿ ಮಾಡಿ ಕ್ರಾಂತಿಕಾರಕ ಬದಲಾವಣೆ ತಂದರು. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ 1977ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಥಾಪಿಸಿದರು. ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ, ಉದ್ಯೋಗಕ್ಕಾಗಿ ತರಬೇತಿ ಮೊದಲಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದರು.

2020-21 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಗಳಲ್ಲಿದ್ದು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಬಾಲಕ / ಬಾಲಕಿಯರಿಗೆ ಇದೇ ವೇಳೆ ಸನ್ಮಾನಿಸಲಾಯಿತು.

ಈ ವೇಳೆ ಶಹಾಪುರ ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ದೀಪಿಕಾ ತನ್ನ ತಂದೆಯ ಸಾವಿನಲ್ಲೂ 10ನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು 625 ಕ್ಕೆ 585 ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಕ್ಕೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ದೀಪಿಕಾ, ‘ನನಗೆ ಕಷ್ಟ ಬಂದಾಗ ಜನ್ಮದಾತರನ್ನು ನೆನಪಿಸಿಕೊಳ್ಳುತ್ತಿದ್ದೆ. ಅಧಿಕಾರಿಗಳು ನನಗೆ ವಿದ್ಯಾಭ್ಯಾಸ ಮುಂದುವರೆಸು ಎಂದು ಧೈರ್ಯ ತುಂಬಿದ್ದಾರೆ’ ಎಂದಾಗ ಸಭಾಂಗಣದಲ್ಲಿ ಇದ್ದವರೆಲ್ಲರೂ ಒಂದು ಕ್ಷಣ ಭಾವುಕರಾದರು.

ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸವ ಎಸ್, ದೇವರಾಜು ಅರಸು ಸಂಘದ ಅಧ್ಯಕ್ಷ ಸುರೇಶ ಕೋಟಿಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಇದ್ದರು.

***

‘ಉಚಿತ ತರಬೇತಿ ಸದ್ಬಳಕೆ ಮಾಡಿಕೊಳ್ಳಿ’

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಸಾಮಾಜಿಕ ದಬ್ಬಾಳಿಕೆ ವಿರುದ್ಧ ಹೋರಾಡಿದ ಸಾಮಾಜಿಕ ನ್ಯಾಯ ಒದಗಿಸಿ ಅರಸುರವರು ನಮಗೆಲ್ಲ ಪ್ರೇರಣೆಯಾಗಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಡಿಸಿಯಾಗಿ, ಎಸ್ಪಿಯಾಗಿ ಹೊರ ಹೊಮ್ಮಬೇಕು ಎಂದು ಪ್ರೇರೇಪಿಸಿದರು.

ಎಸ್ಪಿ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಪಿಎಸ್‌ಐ ತರಬೇತಿ ಆರಂಭಿಸಿದ್ದೇವೆ. ಎಲ್ಲರಿಗೂ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಎಲ್ಲರೂ ಸದ್ಬಳಕ್ಕೆ ಮಾಡಿಕೊಳ್ಳಿ. ಮುಂದೆಯೂ ಬ್ಯಾಂಕಿಂಗ್, ಕೆಎಎಸ್, ಐಎಎಸ್ ಇನ್ನಿತರ ತರಬೇತಿ ಕೊಡುವ ಉದ್ದೇಶವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT