ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಜಿಲ್ಲೆಯಾದ್ಯಂತ ಜನವರಿ 6, 7, 8ರಂದು ಮತದಾರರ ಮಿಂಚಿನ ನೋಂದಣಿ

Last Updated 6 ಜನವರಿ 2020, 16:09 IST
ಅಕ್ಷರ ಗಾತ್ರ

ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಜನವರಿ 6, 7 ಮತ್ತು 8ರಂದು ಮಿಂಚಿನ ನೋಂದಣಿ ಹಮ್ಮಿಕೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಯಾಗದೆ ಇರುವ ಅರ್ಹ ಯುವಕ-ಯುವತಿಯರು, ನಾಗರಿಕರು ಹೆಸರು ನೋಂದಾಯಿಸಬಹುದಾಗಿದೆಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮತದಾರರ ನೋಂದಣಿ ಕುರಿತ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಹೆಸರನ್ನು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿ (ಬಿ.ಎಲ್.ಓ)ಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದರು.

ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ 1ನೇ ಜನವರಿ2020ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ 15ರ ವರೆಗೆ ಸಲ್ಲಿಸಬಹುದು. ಅಲ್ಲದೇ, ಜನವರಿ 15ರ ವರೆಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜನವರಿ 27ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ಫೆಬ್ರುವರಿ 4ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರುವರಿ 7ರಂದು ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಮಿಂಚಿನ ನೋಂದಣಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡ ಅಭ್ಯರ್ಥಿಗಳ ವಿವರವನ್ನು ಪ್ರತಿದಿನ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಲೋಕಸಭಾ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯೇ ಅನ್ವಯವಾಗುತ್ತದೆ. ಈ ವರ್ಷ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯುವ ಸಂಭವ ಇದೆ. ಹಾಗಾಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಹೆಚ್ಚಿನ ಪ್ರಚಾರ ನಡೆಸಿ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಪ್ರತಿಯೊಬ್ಬರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಗಿರಿ ಸಹಾಯಕ ಆಯುಕ್ತರ ಕಾರ್ಯಾಲಯ, ಸುರಪುರ, ಶಹಾಪುರ, ಯಾದಗಿರಿ ತಹಶೀಲ್ದಾರರ ಕಾರ್ಯಾಲಯಗಳು ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಲ್ಲದೆ ceokarnataka.kar.nic.in ಅಂತರ್ಜಾಲ ತಾಣದಲ್ಲಿ ಸಹ ಪರಿಶೀಲಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ಚುನಾವಣೆ ಶಾಖೆಯ ಶಿರಸ್ತೇದಾರ್ ಪರಶುರಾಮ ಸಭೆಯಲ್ಲಿ ಉಪಸ್ಥಿತರಿದ್ದರು.

***

ಕಳೆದ ಜನವರಿ 1ಕ್ಕೆ 18 ವರ್ಷ ಪೂರೈಸಿದ ಯುವಕರು, ಯುವತಿಯರು ಅಥವಾ ಅರ್ಹ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು.

ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT