ಸೋಮವಾರ, ಜುಲೈ 26, 2021
26 °C
ಜನಸಂಖ್ಯಾ ನಿಯಂತ್ರಣದಿಂದ ದೇಶದ ಆರ್ಥಿಕ ಪ್ರಗತಿ: ಶಾಸಕ ಮುದ್ನಾಳ

ಯಾದಗಿರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಚಿಕ್ಕ ಕುಟುಂಬವಿದ್ದರೆ ಸುಖಿಃ ಸಂಸಾರ ನಮ್ಮದಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರದ ಕುಟುಂಬ ಕಲ್ಯಾಣ ಯೋಜನೆಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆ ನಿಯಂತ್ರಣದಲ್ಲಿ ಕೈಜೋಡಿಸಬೇಕು. ಜನಸಂಖ್ಯಾ ನಿಯಂತ್ರಣದಿಂದ ಮಾತ್ರ ದೇಶದ ಆರ್ಥಿಕ ಪ್ರಗತಿ ಸಾಧ್ಯ ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಲವಾರು ಕುಟುಂಬಗಳು ಮೂಲ ಸೌಲಭ್ಯಗಳಿಂದ ವಂಚಿತರಾಗುತ್ತವೆ. ಮಾಹಿತಿ, ಶಿಕ್ಷಣ, ಸಂವಹನ (ಐ.ಇ.ಸಿ) ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಂಖ್ಯಾ ಸ್ಫೋಟದ ಬಗ್ಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕೋವಿಡ್-19 ನಿಗ್ರಹಕ್ಕಾಗಿ ಸರ್ಕಾರದಿಂದ ಕಾಲಕಾಲಕ್ಕೆ ಬಿಡುಗಡೆ ಮಾಡುವ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ಜಿಲ್ಲೆಯನ್ನು ಕೊರೊನಾ ಮುಕ್ತವನ್ನಾಗಿಸಲು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿ, ದಂಪತಿಗಳಲ್ಲಿ ಅಂತರದ ಹೆರಿಗೆ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಗಳಲ್ಲಿ ಶಾಶ್ವತ ಹಾಗೂ ತಾತ್ಕಾಲಿಕ ಎರಡು ವಿಧಾನಗಳಿವೆ. ಟಿಬೋಕ್ಟಮಿ, ಲ್ಯಾಪ್ರೋಸ್ಕೋಪಿ ಮತ್ತು ವ್ಯಾಸೆಕ್ಟಮಿ ಶಾಶ್ವತ ವಿಧಾನಗಳಾಗಿವೆ. ನುಂಗುವ ಮಾತ್ರೆ, ನಿರೋಧ ಬಳಕೆ ಮತ್ತು ವಂಕಿ ಅಳವಡಿಕೆಯಂತಹ ತಾತ್ಕಾಲಿಕ ವಿಧಾನಗಳ ಮೂಲಕವೂ ಜನಸಂಖ್ಯೆಯನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಬಿ.ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿಪತ್ತಿನಲ್ಲಿ ಕುಟುಂಬ ಯೋಜನೆಯ ತಯಾರಿ, ಸಧೃಢ ರಾಷ್ಟ್ರ ಮತ್ತು ಕುಟುಂಬದ ಸಂಪೂರ್ಣ ಜವಾಬ್ದಾರಿ’ ಈ ವರ್ಷದ ವಿಶ್ವ ಜನಸಂಖ್ಯಾ ದಿನಾಚರಣೆಯ ಘೋಷಣೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಾಜೀದ್, ಆರೋಗ್ಯ ಮೇಲ್ವಿಚಾರಕ ಸತ್ಯನಾರಾಯಣ ಇದ್ದರು.

ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕ ಮಹಿಪಾಲರೆಡ್ಡಿ ಮಾಲಿ ಪಾಟೀಲ ನಿರೂಪಿಸಿದರು. ಹಿರಿಯ ಆರೋಗ್ಯ ಸಹಾಯಕ ಪರಮರೆಡ್ಡಿ ಕಂದಕೂರ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.