ಶನಿವಾರ, ಸೆಪ್ಟೆಂಬರ್ 25, 2021
27 °C

ನಗರ ಪ್ರದಕ್ಷಿಣೆ ನಡೆಸಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಪ್ರಮುಖ ಸ್ಥಳ ಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣ ದಲ್ಲಿ ಮಂಗಳವಾರ ಜರುಗಿದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ನಗರದ ಪ್ರತಿಯೊಂದು ವಾರ್ಡ್‌ಗಳಿಗೆ ಭೇಟಿ ನೀಡಬೇಕು. ಘನತ್ಯಾಜ್ಯ ವಿಂಗಡನೆಯ ನಿರ್ವಹಣೆಗೆ ಎಲ್ಲಾ ಸ್ಥಳೀಯ ಸಂಸ್ಥೆಗಳು ಪ್ರಥಮ ಆದ್ಯತೆ ನೀಡಬೇಕು. ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲಿಯೇ ತ್ಯಾಜ್ಯ ವಿಂಗಡನೆಯನ್ನು ತಮ್ಮ ತಮ್ಮ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ಕೋವಿಡ್ ಲಸಿಕಾ ಕುರಿತು ನಗರದ ವ್ಯಾಪ್ತಿಯಲ್ಲಿ ಜಾಗೃತ ಅಭಿಯಾನ ಆಯೋಜಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ನೀಡಿದ ಗುರಿಗೆ ಅನುಗುಣವಾಗಿ ಗುರಿ ಸಾಧಿಸಲು ಹೆಚ್ಚು ಒತ್ತು ನೀಡಬೇಕು. ಎಲ್ಲಾ ಸ್ಥಳೀಯ ಸಂಸ್ಥೆಯ ಪ್ರತಿ ಸಿಬ್ಬಂದಿಗೆ 50 ಜನರ ಗುರಿ ನೀಡಿ ನಗರದಲ್ಲಿ ಸಂಪೂರ್ಣವಾಗಿ ಲಸಿಕಾಕರಣ ಗುರಿ ತಲುಪಲು ಸೂಚಿಸಿದರು. ಲಸಿಕಾಕರಣದಿಂದ ಮಾತ್ರ ಮೂರನೇ ಅಲೆ ತಪ್ಪಿಸಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ನಗರೋತ್ಥಾನ ಹಂತ -3 (ಮೂರರ) ರಡಿಯಲ್ಲಿ ಮಂಜೂರಾದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿಯನ್ನು ಪರಿಶೀಲಿಸಿದರು. ಬಾಕಿ ಉಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದ ಅವರು, ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುತ್ತದೆ ಎಂದು ಸೂಚಿಸಿದರು.

14 ಮತ್ತು 15ನೇ ಹಣಕಾಸು ಬೇಸಿಕ್ ಗ್ರ್ಯಾಂಟ್ ಮತ್ತು ಎಸ್‌ಎಫ್‌ಸಿ, ಮುಕ್ತ ನಿಧಿ, ವಿಶೇಷ ಅನುದಾನದಡಿ ಪ್ರತಿಯೊಂದು ನಗರದ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಪ್ರಗತಿಯ ಮಾಹಿತಿಯನ್ನು ಜಿಲ್ಲಾಧಿಕಾರಿ ಮಾಹಿತಿ ಪಡೆದರು.

ವಾರ್ಡ್‌ಗಳು ಸಮಸ್ಯೆ ಮತ್ತಿತರ ಕಾರಣಗಳಿಂದ ವಿಳಂಬವಾಗಿದ್ದರೆ ಮರು ಕ್ರಿಯಾ ಯೋಜನೆಯನ್ನು ಸಲ್ಲಿಸಿ ನಿಗದಿತ ಅವಧಿಯೊಳಗಾಗಿ ಎಲ್ಲಾ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಸಲಾಂ ಹುಸೇನ್, ಯಾದಗಿರಿ ನಗರಸಭೆ ಪೌರಾಯುಕ್ತ ಭೀಮಣ್ಣ ನಾಯಕ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು