ಯಾದಗಿರಿ : ಹೋರಾಟವವನ್ನೇ ಉಸಿರಾಗಿಸಿಕೊಂಡು ಬ್ರಿಟಿಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನಿಯರನ್ನು ನಾವು ನಿತ್ಯ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ವಾಗಬೇಕಾದರೆ ಅದರ ಹಿಂದೆ ಹಲವಾರು ಶೂರರ ಶ್ರಮವಿದೆ. ಕೆಚ್ಚೆದೆಯಿಂದ ಹೋರಾಡಿ ಬ್ರಿಟಿಷರ 200 ವರ್ಷಗಳ ಆಳ್ವಿಕೆಯನ್ನು ಕೊನೆಗಾಣಿಸಿದರು. ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಜವಾಹರಲಾಲ್ ನೆಹರೂ, ಬಿಪಿನ್ ಚಂದ್ರ ಪಾಲ್, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಚಿತ್ತರಂಜನ್ ದಾಸ್, ಬಾಲಗಂಗಾಧರ ತಿಲಕ್, ಲಾಲಾ ಲಜಪತರಾಯ್, ಚಂದ್ರಶೇಖರ ಆಜಾದ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚನ್ನಮ್ಮ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ತುಂಬುವಂತ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ಜನರಿಗೆ 371 (ಜೆ) ಜಾರಿಗೆ ತರುವುದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಅವರು ನಮಗೆ ಎರಡನೇ ಅಂಬೇಡ್ಕರ್ ಆಗಿದ್ದಾರೆ ಎಂದು ಬಣ್ಣಿಸಿದರು.
ಕೆಕೆಆರ್ ಡಿಬಿಗೆ ನೂತನ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ನೇಮಕವಾಗಿದ್ದು, ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಅಗಲಿವೆ ಎಂದು ತಿಳಿಸಿದರು.
ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ರೈತರಿಗೆ ತಾಳೆ ಮರದ ಸಸಿ ವಿತರಿಸಲಾಯಿತು.
ನಂತರ ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ನಡೆಯಿತು.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ವಿಧಾನ ಪರಿಷತ್ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಡಾ. ಸುಶೀಲಾಬಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪಂವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ, ಡಿಎಫ್ಒ ಅಧಿಕಾರಿ ಕಾಜೋಲ್ ಪಾಟೀಲ, ಯಾದಗಿರಿ ತಹಶೀಲ್ದಾರ್ ಸುರೇಶ ಅಂಕಲಗಿ, ಪ್ರೊ. ಶುಭಾಶ್ಚಂದ್ರ ಕೌಲಗಿ ಸೇರಿದಂತೆ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.