ಮಂಗಳವಾರ, ಜುಲೈ 27, 2021
20 °C
ನೇರ ಫೋನ್-ಇನ್ ಕಾರ್ಯಕ್ರಮ

‘ಮಾಸ್ಕ್ ಧರಿಸುವುದು ರೂಢಿಯಾಗಲಿ: ಜಿಲ್ಲಾಧಿಕಾರಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಹಾಗೂ ಸೋಪು ಅಥವಾ ಸ್ಯಾನಿಟೈಸರ್‌ನಿಂದ ಕೈ ತೊಳೆದುಕೊಳ್ಳುವುದು ನಿತ್ಯದ ರೂಢಿಯಾಗಬೇಕು. ಈ ಮೂರು ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಜಿಲ್ಲೆ ಕೊರೊನಾ ಮುಕ್ತವಾಗುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಆಲಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಸ್ಕ್ ಧರಿಸುವ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ನೀಡಲಾಗುತ್ತಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳ ವತಿಯಿಂದ ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಈ ಬಗ್ಗೆ ತಿಳಿವಳಿಕೆ ಇದ್ದರೂ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ. ಅಗತ್ಯ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಕರವಸ್ತ್ರ ಅಥವಾ ಇನ್ಯಾವುದೇ ವಸ್ತ್ರದಿಂದ ಮುಖಕ್ಕೆ ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು.

ನೇರ ಪೋನ್-ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯಿಂದ 10ಕ್ಕೂ ಹೆಚ್ಚು ಗ್ರಾಮ/ ನಗರಗಳಿಂದ ಕರೆಗಳು ಸ್ವೀಕೃತವಾದವು. ಆರೋಗ್ಯ ಕೇಂದ್ರಕ್ಕೆ ವೈದ್ಯರು ಸಮಯಕ್ಕೆ ಸರಿಯಾಗಿ ಬರದಿರುವುದು, ಗುಟ್ಕಾ ಸೇವನೆಗೆ ಕಡಿವಾಣ, ಮಾಸ್ಕ್ ಧರಿಸುವ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ದಂಡ ವಿಧಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಕರೆ ಮಾಡಿದ ಸಾರ್ವಜನಿಕರು ಗಮನ ಸೆಳೆದರು. 

ದಂಡ ವಿಧಿಸಲು ಸೂಚನೆ: ಸಾರ್ವಜನಿಕರು ತಂಬಾಕು ಹಾಗೂ ಪಾನ್‍ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಿಂದು ಉಗುಳುವುದು ಕೊರೊನಾ ವೈರಸ್ ಹರಡಲು ಕಾರಣವಾಗಬಹುದು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಮತ್ತು ಉಗುಳುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಗಳ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಕೋವಿಡ್-19 ರೋಗ ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಕಾಣಿಸಿದಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಬೇಕು. ಅಥವಾ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಮ್ ಸಂಖ್ಯೆ 08473-253950, ವಾಟ್ಸ್‌ಆ್ಯಪ್ ಸಂಖ್ಯೆ:94499 33946 ಅಥವಾ 104 ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು