ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಡಿಕಲ್ ಕಾಲೇಜು ನಿರ್ಮಾಣ; ಶೀಘ್ರ ಭೂಮಿಪೂಜೆ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭರವಸೆ
Last Updated 13 ಜೂನ್ 2020, 16:55 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಬಹು ವರ್ಷಗಳ ಕನಸಾದ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಂದ ಎರಡು ಅಥವಾ ಮೂರು ವಾರಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೇಂದ್ರ ಪುರಸ್ಕೃತ ಯೋಜನೆಯಡಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಅನುಮತಿ ನೀಡಲಾಗಿದೆ. ₹438.75 ಕೋಟಿ ವೆಚ್ಚದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದ್ದು, ಜೂನ್ 16ಕ್ಕೆ ಅಂತಿಮ ಬಿಡ್ ತೆರೆಯಲಾಗುತ್ತಿದೆ. ಚಿಕ್ಕಬಳ್ಳಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 30 ತಿಂಗಳೊಳಗೆ ವೈದ್ಯಕೀಯ ಕಾಲೇಜುಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ಬೇಕಾದ 111 ಬೋಧಕ ಸಿಬ್ಬಂದಿ ನೇಮಕಾತಿಗಾಗಿ ಸದ್ಯದಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು. 150 ಸೀಟುಗಳ ಎಂಬಿಬಿಎಸ್ ಪ್ರವೇಶಕ್ಕಾಗಿ ಈಗಾಗಲೇ ಪ್ರಸ್ತಾವನೆ ಬಂದಿದೆ. ಎಂಸಿಐ ತಂಡ ಪರಿವೀಕ್ಷಣೆಗೆ ಬರುವ ಮುನ್ನ ಬೋಧಕ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಲಾಗುವುದು. ಇನ್ನು 300 ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದೆ. ಆಸ್ಪತ್ರೆಗೆ ಬೇಕಾದ ಉಪಕರಣಗಳು ಮತ್ತು ಮೂಲ ಸೌಕರ್ಯಗಳನ್ನುಒದಗಿಸಿಶೀಘ್ರದಲ್ಲಿ ಇಲಾಖೆಗೆ ಹಸ್ತಾಂತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್-19 ಆಸ್ಪತ್ರೆಯಲ್ಲಿ ಈಗಾಗಲೇ ಕೋವಿಡ್‌ ಪರೀಕ್ಷೆ ನಡೆಸುವ ಆರ್‌ಟಿಸಿಆರ್‌ ಲ್ಯಾಬ್ ಉದ್ಘಾಟಿಸಲಾಗಿದ್ದು, ಇನ್ನೊಂದು ವಾರದಲ್ಲಿ ಪ್ರಯೋಗಾಲಯ ಕಾರ್ಯಾಚರಣೆ ಮಾಡಲಿದೆ ಎಂದರು.

ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಮತ್ತು ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ಮಹಾರಾಷ್ಟ್ರದಿಂದ ಜಿಲ್ಲೆಗೆ ವಾಪಸಾದ ವಲಸಿಗರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಬರುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಕರೆ ಮಾಡಿ ವಲಸಿಗರ ಮಾಹಿತಿ ನೀಡುತ್ತಿದ್ದು, ಅಂಥವರನ್ನು ಕ್ವಾರಂಟೈನ್‍ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಐಎಲ್‍ಐ 1,386 ಮತ್ತು 193 ಸ್ಯಾರಿ ಪ್ರಕರಣಗಳಿವೆ. ಇವುಗಳಲ್ಲಿ ಒಂದೂ ಪಾಸಿಟಿವ್ ಬಂದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು.ಸಭೆಯ ನಂತರ ಡಾ.ಕೆ.ಸುಧಾಕರ್ ಅವರು, ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜಿನ ರೂಪುರೇಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಂಸದ ಡಾ.ಉಮೇಶ್ ಜಿ.ಜಾಧವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಡಾ.ಪಿ.ಜಿ.ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಉಪವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿ ಡಾ.ಶಂಕರಗೌಡ ಐರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಇದ್ದರು.

***

ಜೀವ ಉಳಿಸುವುದಕ್ಕಾಗಿ ಲಾಕ್‍ಡೌನ್ ಮಾಡಲಾಗಿತ್ತು. ಈಗ ಜೀವ ಉಳಿಸುವುದರ ಜೊತೆಗೆ ಜೀವನ ನಡೆಸಲು ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT