ಮಂಗಳವಾರ, ಸೆಪ್ಟೆಂಬರ್ 21, 2021
21 °C
ಜಿಲ್ಲೆಯಾದ್ಯಂತ ಗುರುವೃಂದದ ಗುಣಗಾನ

ಶಿಕ್ಷಕರಿಗೆ ಸಿಹಿ ತಿನಿಸಿದ ಮಕ್ಕಳು: ದಾರಿ ತೋರಿದ ಗುರುವಿಗೆ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರವೂ ಸೇರಿದಂತೆ ಜಿಲ್ಲೆ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಶಾಲಾ–ಕಾಲೇಜು, ಕೆಲವು ಸಂಘ–ಸಂಸ್ಥೆಗಳ ಕಚೇರಿಗಳಲ್ಲಿ ಭಾನುವಾರ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿ, ಶಿಕ್ಷಕರ ಸೇವೆಯನ್ನು ಸ್ಮರಿಸಲಾಯಿತು.

ಇದೇ ವೇಳೆ ತಮಗೆ ವಿದ್ಯೆ ಕಲಿಸಿದ, ಬದುಕಿಗೆ ಮಾರ್ಗದರ್ಶನ ನೀಡಿದ ಗುರುಗಳನ್ನ ಸ್ಮರಣೆಯನ್ನು ಹಲವರು ಮಾಡಿ, ತಮ್ಮದೇಯಾದ ಭಾವನೆಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ ನಮನ ಸಲ್ಲಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲಿ: ‘ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯು ಹೆಚ್ಚಿನ ಪ್ರಗತಿ ಸಾಧಿಸಲು ಶಿಕ್ಷಕರು ವಿರಮಿಸದೆ ಸಾಧನೆಯತ್ತ ಹೆಜ್ಜೆ ಹಾಕಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಅವರು ಹೇಳಿದರು.

ಜಿಲ್ಲಾಡಳಿತ, ಜಿ.ಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಆರ್‌ವಿ ಕಾಲೇಜು ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ಡಾ.ಸರ್ವಪಲ್ಲಿ ರಾಧಕೃಷ್ಣನ್‍ ಅವರ 133ನೇ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ನಮ್ಮ ಜೀವನ ಸುಧಾರಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ‌ ದೊರೆತು, ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂಬುವುದು ನಮ್ಮ ಆಸೆಯ ಎಂದರು.

ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ಶಿಕ್ಷಕರು ಮಕ್ಕಳ ಭವಿಷ್ಯಕ್ಕೆ ಅಗತ್ಯವಾದ ಎಲ್ಲ ಕೌಶಲಗಳನ್ನು ತುಂಬಿ, ಅವರ ಸರ್ವತೋಮುಖ ಬೆಳವಣಿಗೆಗೆ ನೆರವಾಗುತ್ತಿದ್ದಾರೆ. ಶಿಕ್ಷಕರಿಂದ ಮಾತ್ರವೇ ಸಮಾಜ ತಿದ್ದುವ ಕೆಲಸ ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ‌ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕದಿಂದ ರಕ್ತದಾನ ಶಿಬಿರ ನಡೆಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ರವಿ ಎಂ.ಸಿ, ಮಂಜುನಾಥ್ ಪಟ್ಟೇದ್‌ ಹಾಗೂ ರೂಪಾ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ, ಇಸಿಒ ಮಲ್ಲಿಕಾರ್ಜುನ ಕಾವಲಿ, ಶಿಕ್ಷಕರಾದ ಖಂಡ್ಯಾನಾಯ್ಕ್ ಬಿ., ಉಮೇಶ, ಸರ್ಕಾರಿ ಶಿಕ್ಷಕರ ಸಂಘಗಳ ಪದಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು ಇದ್ದರು.

***

ಶಿಕ್ಷಕರ ಪ್ರಶಸ್ತಿ ಪ್ರದಾನ

2021-22ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಭಾನುವಾರ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಅವರು ಪ್ರದಾನ ಮಾಡಿದರು.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ; ಮಂಜುನಾಥ ಪಟ್ಟೇದ, ಅಮೀನಾ ರೂಹಿ ಮತ್ತು ಶ್ರೀಶೈಲ್ ಗುಬ್ಯಾಡ.

ಹಿರಿಯ ಪ್ರಾಥಮಿಕ ವಿಭಾಗ: ರೂಪಾ ಕೆ., ಈರಪ್ಪ ಭಜಂತ್ರಿ, ಮುತ್ಯಾ ಕರಿವಳಿ ಮತ್ತು ಸಿದ್ದನಗೌಡ.

ಪ್ರೌಢ ಶಾಲಾ ವಿಭಾಗ: ಚಂದ್ರಶೇಖರ ಬಿ. ಹೊಸಮಠ (ಚಿತ್ರ ಕಲಾ), ನಾಗಣ್ಣ ಮತ್ತು ರವಿ ಎಂ.ಸಿ.

***

ಎಸ್ಸೆ‌ಸ್ಸೆಲ್ಸಿ ಫಲಿತಾಂಶದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಬೋಧನೆಯಲ್ಲಿ ತೊಡಗಿಸಿಕೊಳ್ಳಬೇಕು

- ಡಾ.ರಾಗಪ್ರಿಯಾ ಆರ್‌., ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು