ಯಾದಗಿರಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಗರಿಮಾ ಪಂವಾರ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಬೀದರ್ ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ (ಸೇವೆಗಳು-1) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿಜಿಟಲ್ ಆರೋಗ್ಯ (ಇ-ಆರೋಗ್ಯ) ನಿರ್ದೇಶಕರಾಗಿ ಪಂವಾರ್ ವರ್ಗಾವಣೆಯಾಗಿದ್ದಾರೆ. 2022 ಜನವರಿ 25ರಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಅವಧಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದು ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಮೂವರು ಮೃತಪಟ್ಟಿದ್ದರು.