ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ಲಕ್ಷ ಹುದ್ದೆ ಭರ್ತಿ: ಸಿ.ಎಂ ಬೊಮ್ಮಾಯಿ

Last Updated 22 ಡಿಸೆಂಬರ್ 2022, 22:00 IST
ಅಕ್ಷರ ಗಾತ್ರ

ಬೆಳಗಾವಿ: 2023ರ ಬಜೆಟ್‌ನಿಂದ ಮತ್ತೊಂದು ಬಜೆಟ್‌ನ ಒಂದು ವರ್ಷದ ಅವಧಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.58 ಲಕ್ಷ ಹುದ್ದೆಗಳ ಪೈಕಿ 1 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಸಿ.ಎನ್. ಮಂಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವಶ್ಯ ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುತ್ತೇವೆ ಎಂದು ಹೇಳಿದರು.

ಸಿ ಮತ್ತು ಡಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗಾಗಿ, ಕೆಲಸಕ್ಕೆ ತೊಂದರೆಯಾಗಿಲ್ಲ ಎಂದರು.

209 ಆಯುಷ್‌ ವೈದ್ಯಾಧಿಕಾರಿ ಹುದ್ದೆ ಭರ್ತಿ

ಆಯುಷ್‌ ಇಲಾಖೆಯಲ್ಲಿ ಖಾಲಿ ಇರುವ 209 ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆಯ ಒಪ್ಪಿಗೆ ಪತ್ರ ಬರೆಯಲಾಗಿದ್ದು, ಒಪ್ಪಿಗೆ ಸಿಕ್ಕಿದ ತಕ್ಷಣ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ವಿಧಾನಸಭೆಯಲ್ಲಿ ತಿಳಿಸಿದರು.

ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯಾಧಿಕಾರಿಗಳನ್ನು ಕಾಯಂಗೊಳಿಸಲು ಅವಕಾಶವಿಲ್ಲ ಎಂದರು.

ಆದರೆ, ನೇಮಕಾತಿ ಸಂದರ್ಭದಲ್ಲಿ ಇವರಿಗೆ ಆದ್ಯತೆ ನೀಡಲಾಗುವುದು. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ವರ್ಷಕ್ಕೆ 1 ಅಂಕವನ್ನು ನೀಡುವುದರೊಂದಿಗೆ, ವಯೋಮಿತಿಯನ್ನೂ ಸಡಿಸಲಾಗುವುದು. ಒಟ್ಟು 903 ಹುದ್ದೆಗಳಲ್ಲಿ 694 ಹುದ್ದೆಗಳು ಭರ್ತಿ ಆಗಿವೆ ಎಂದು ಹೇಳಿದರು.

12 ಸಾವಿರ ಪೌರಕಾರ್ಮಿಕರ ನೇಮಕಾತಿ

ಸದ್ಯದಲ್ಲೇ 12 ಸಾವಿರ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಈಗಾಗಲೇ 11,200 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅದು ಮುಗಿದ ಕೂಡಲೇ ಹೊಸ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಕರ್ನಾಟಕದ ಇತಿಹಾಸದಲ್ಲೇ ಇಷ್ಟು ಬೃಹತ್ ಪ್ರಮಾಣದಲ್ಲಿ ಸಫಾಯಿ ಕರ್ಮಚಾರಿಗಳ ನೇಮಕಾತಿ ನಡೆಸಿದ
ನಿದರ್ಶನವಿಲ್ಲ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT