ಶನಿವಾರ, ಸೆಪ್ಟೆಂಬರ್ 18, 2021
30 °C

ಸೆ. 27, 29ಕ್ಕೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಸೆ. 27 ಮತ್ತು 29ರಂದು ಸರಳ ರೀತಿಯಲ್ಲಿ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದ್ದು, ಈ ಸಂಬಂಧ ವೇಳಾಪಟ್ಟಿ ಮತ್ತು ಪರೀಕ್ಷಾ ನೋಂದಣಿ ಶುಲ್ಕದ ಅಧಿಸೂಚನೆ ಹೊರಡಿಸಿದೆ.

ಕೋವಿಡ್ ಸೇರಿದಂತೆ ಇತರ ಕಾರಣಗಳಿಗೆ ಕಳೆದ ಜುಲೈನಲ್ಲಿ ನಡೆದ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದ, ಗೈರು ಹಾಜರಾದ ವಿದ್ಯಾರ್ಥಿಗಳು, ಪುನರಾವರ್ತಿತ ಅಭ್ಯರ್ಥಿಗಳು, ಖಾಸಗಿ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದೆ.

ಸೆ. 27ರಂದು ಕೋರ್ ವಿಷಯಗಳಿಗೆ (ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ) ಹಾಗೂ 29ರಂದು ಭಾಷಾ ವಿಷಯಗಳಿಗೆ (ಕನ್ನಡ, ಇಂಗ್ಲಿಷ್, ಹಿಂದಿ) ಪರೀಕ್ಷೆ ನಡೆಯಲಿದೆ. ಎರಡೂ ದಿನ ಬೆಳಿಗ್ಗೆ 10.30ರಿಂದ
ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ.

ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪ್ರಾಯೋಗಿಕ ಪರೀಕ್ಷೆ ಸೆ. 27ರಂದು ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆವರೆಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 2011ರಿಂದ 2018ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾನೂನಾತ್ಮಕವಾಗಿ ಇದ್ದ 6 ಪ್ರಯತ್ನಗಳು ಮುಕ್ತಾಯ ಆಗಿರುವುದರಿಂದ ಪೂರಕ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಮಂಡಳಿ ತಿಳಿಸಿದೆ.

ನೋಂದಣಿ ಶುಲ್ಕ: 2020-21ನೇ ಸಾಲಿನ ಮುಖ್ಯ ಪರೀಕ್ಷೆಗೆ ನೋಂದಾಯಿಸಿ ಕೋವಿಡ್ ಮತ್ತು ಇತರೆ ಕಾರಣ
ದಿಂದ ಪರೀಕ್ಷೆಗೆ ಗೈರು ಹಾಜರಾದವರಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸದ ವಿದ್ಯಾರ್ಥಿಗಳಿಗೆ ₹ 507, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಒಂದು ವಿಷಯಕ್ಕೆ ₹ 320, ಎರಡು ವಿಷಯಕ್ಕೆ ₹ 386 ಮತ್ತು ಮೂರು ಮತ್ತು ಅದಕ್ಕಿಂತ ಹೆಚ್ಚು ವಿಷಯಗಳಿಗೆ ₹ 520 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ.

ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಇದೇ 19ರಿಂದ ಸೆ. 3ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 17,469 ಖಾಸಗಿ ವಿದ್ಯಾರ್ಥಿಗಳು, 352 ಪುನರಾವರ್ತಿತ, 593 ಫಲಿತಾಂಶ ತಿರಸ್ಕರಿಸಿರುವ ವಿದ್ಯಾರ್ಥಿಗಳು ಸೇರಿ ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲ್ಲೂಕಿಗೆ ಒಂದರಂತೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಪರೀಕ್ಷಾ ಕೇಂದ್ರ ಸೇರಿ ಒಟ್ಟು 187 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು