ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ವೃತ್ತಿಪರ ಕೋರ್ಸ್‌: ಏ.18, 19 ರಂದು ಸಿಇಟಿ ಪರೀಕ್ಷೆ

Published 17 ಏಪ್ರಿಲ್ 2024, 3:04 IST
Last Updated 17 ಏಪ್ರಿಲ್ 2024, 3:04 IST
ಅಕ್ಷರ ಗಾತ್ರ

ಶಿವಮೊಗ್ಗ: ವಿವಿಧ ವೃತ್ತಿಪರ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಶಾಂತಿಯುತವಾಗಿ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿದ್ಧತೆಗಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

2024ನೇ ಸಾಲಿಗೆ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಯೋಗ ಮತ್ತು ನ್ಯಾಚುರೋಪತಿ, ಬಿಎಸ್‍ಸಿ ನರ್ಸಿಂಗ್, ಫಾರ್ಮಸಿ ಕೋರ್ಸ್‍ಗಳಿಗೆ ಪ್ರವೇಶಾತಿ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏ.18 ಮತ್ತು 19 ರಂದು ಬೆಳಿಗ್ಗೆ 10.30 ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ನಡೆಸಲಿದೆ.

ಶಿವಮೊಗ್ಗ ನಗರದಲ್ಲಿ 20, ಭದ್ರಾವತಿ 4 ಮತ್ತು ಸಾಗರದ 2 ಸೇರಿ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಮೂರು ಜನ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿ, ಒಬ್ಬರನ್ನು ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಇತರೆ ಅಧಿಕಾರಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಆಸನದ ವ್ಯವಸ್ಥೆ, ಕುಡಿಯುವ ನೀರು, ಸಿಸಿಟಿವಿ ಕ್ಯಾಮೆರಾ, ಇತರೆ ವ್ಯವಸ್ಥೆಗಳನ್ನು ಮಾಡಲು ಸೂಚಿಸಿ, ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಲು ಸೂಚಿಸಿದರು.

ಪರೀಕ್ಷೆ ನಡೆಯುವ ದಿನ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿದ್ದು ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳ ತಪಾಸಣೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಒದಗಿಸಲು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ
ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಆಭರಣಗಳನ್ನು ಧರಿಸುವಂತಿಲ್ಲ ಎಂದು ಸೂಚನೆ ನೀಡಿದರು.

ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಿಎಚ್‍ಓ ಡಾ.ನಟರಾಜ್, ಪೊಲೀಸ್ ಅಧಿಕಾರಿ ಅನಸೂಯ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT