ಶನಿವಾರ, ಜೂಲೈ 11, 2020
29 °C

ಎಸ್ಎಸ್ಎಲ್‌ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಿ: ಎಸ್. ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

S Sureshkumar

ಬೆಂಗಳೂರು: ಕೊರೊನಾ ಲಾ‌ಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಅನುವಾಗುವಂತೆ ಎಲ್ಲ ಸಿದ್ದತೆಗಳನ್ನು ಈಗಿನಿಂದಲೇ ಪ್ರಾರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೊ ಸಂವಾದವನ್ನು ಸಚಿವರು ನಡೆಸಿದರು. ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದಾರೆ. ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೋನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು ಸೂಚಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ಜಿಲ್ಲೆಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಸಚಿವರು ಅಭಿಪ್ರಾಯಪಡೆದರು.

ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಮಾನಸಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಿದ್ಧತೆಯನ್ನು ಜಾರಿಯಲ್ಲಿಡಬೇಕೆಂದು ಸೂಚಿಸಿದರು.

ಮಾಸ್ಕ್, ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್‌ಗಳನ್ನು ಒದಗಿಸಬೇಕು. ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ ಸಚಿವರು, ಅಗತ್ಯವಾದ ಡೆಸ್ಕ್, ಬೆಂಚ್‌ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು.

ಕಂಟೈನ್‌ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವುದು, ಉಪಕೇಂದ್ರಗಳನ್ನು ಸ್ಥಾಪಿಸುವುದು, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ತಲಾ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂಡಿಸುವುದು, ಪ್ರತಿ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಸಮಗ್ರವಾದ ಕ್ರಿಯಾಯೋಜನೆ ತಯಾರಿಸಬೇಕೆಂದು ಸೂಚನೆ ನೀಡಿದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳನ್ನು ಹಾಗೂ ಕೊಠಡಿಗಳನ್ನು ಹೆಚ್ಚಿಸಲು ಸ್ಥಳ ಪರಿಶೀಲನೆ ನಡೆಸಿ ಇಲಾಖಾ ಮುಖ್ಯಸ್ಥರಿಗೆ ಕೂಡಲೇ ವರದಿ ಸಲ್ಲಿಸಬೇಕೆಂದು ಸೂಚಿಸಿದರು.

ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ: ಶಿಕ್ಷಣ ಇಲಾಖೆಯು ಚಂದನ ವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದೆ. ಈ ವಾರದಿಂದಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲಾಖೆಯ ಮಕ್ಕಳವಾಣಿ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿವೆ. ಪರೀಕ್ಷೆ ಶೀಘ್ರ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ನೀಡಬೇಕೆಂದು ಸಚಿವರು ಡಿಡಿಪಿಐಗಳಿಗೆ ಸೂಚಿಸಿದರು. 

ಪರೀಕ್ಷೆ ಸಿದ್ಧತೆಗೆ ಸಮಯ: ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು ಅವಶ್ಯಕ ಅಂತರವನ್ನು ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.

ಎಸ್ಎಸ್ಎಲ್‌ಸಿ ಪರೀಕ್ಷಾ ಸಿದ್ಧತೆ ಕುರಿತು, ಆನ್ಲೈನ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆ ವಿನಿಮಯ, ಸಹಾಯವಾಣಿ ಮೂಲಕ ಸಂದೇಹಗಳ ನಿವಾರಣೆ, ಸ್ಥಳೀಯ ರೇಡಿಯೋ ಕೇಬಲ್ ಟಿವಿ ಚಾನೆಲ್ ಗಳ ಮೂಲಕ ಬೋಧನಾ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ ಇಲಾಖೆಯ ಜಿಲ್ಲಾ ಆಡಳಿತಗಳ ಹಲವಾರು ಉಪಕ್ರಮಗಳನ್ನು ಶ್ಲಾಘಿಸಿದ ಸಚಿವರು, ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರು ನೋಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಇದೇ ರೀತಿಯ ಭರವಸೆ ಮೂಡಿಸುವ ಪ್ರಯತ್ನಗಳು ಪರೀಕ್ಷಾ ಪಕ್ರಿಯೆ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಜಾರಿಯಲ್ಲಿರಲಿ ಎಂದು ಸೂಚಿಸದರು. 

ವಿಡಿಯೋ ಸಂವಾದ ಸಂದರ್ಭದಲ್ಲಿ ಇಲಾಖೆಯ ಆಯುಕ್ತ ಡಾ. ಕೆ.ಜಿ. ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು