ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಗುಜರಾತ್: ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ

Published 19 ಏಪ್ರಿಲ್ 2024, 9:23 IST
Last Updated 19 ಏಪ್ರಿಲ್ 2024, 9:23 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಅಪರಾಹ್ನ 12.39ಕ್ಕೆ ಸರಿಯಾಗಿ ಗಾಂಧಿನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಕೆ.ದಾವೆ ಅವರಿಗೆ ಅಮಿತ್ ಶಾ ನಾಮಪತ್ರ ಸಲ್ಲಿಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆಗಿದ್ದರು.

'ಮೋದಿ ಸರ್ಕಾರದ ಮೊದಲೆರಡು ಅವಧಿಗಳಲ್ಲಿ ಹಿಂದಿನ ಸರ್ಕಾರದ ತಪ್ಪುಗಳನ್ನು ತಿದ್ದುವುದಕ್ಕೆ ಸಂಬಂಧಪಟ್ಟಿದ್ದಾಗಿತ್ತು. 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಮೂರನೇ ಅವಧಿ ನಿರ್ಣಾಯಕವಾಗಿದೆ' ಎಂದು ಅವರು ಹೇಳಿದರು.

'ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ. ಮುಂದಿನ ಐದು ವರ್ಷ 'ವಿಕಸಿತ ಭಾರತ' ಕಲ್ಪನೆಗೆ ಬಲವಾದ ಅಡಿಪಾಯ ಹಾಕಬಹುದಾಗಿದೆ' ಎಂದು ಅವರು ತಿಳಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಬಿಜೆಪಿ ಹಿರಿಯ ನಾಯಕ ಎಲ್.‌ಕೆ. ಅಡ್ವಾಣಿ ಅವರು ಪ್ರತಿನಿಧಿಸಿದ್ದ ಗಾಂಧಿನಗರ ಕ್ಷೇತ್ರದಿಂದಲೇ ಅಮಿತ್ ಶಾ ಕಣಕ್ಕಿಳಿದಿದ್ದಾರೆ.

'ಕಳೆದ 30 ವರ್ಷಗಳಿಂದ ಈ ಕ್ಷೇತ್ರದೊಂದಿಗೆ ಸಂಬಂಧವನ್ನು ಹೊಂದಿದ್ದೇನೆ. ಸಂಸದನಾಗುವ ಮೊದಲು ಈ ಕ್ಷೇತ್ರದ ಅಡಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದೇನೆ. ಗಾಂಧಿನಗರದ ಜನರು ಸದಾ ನನ್ನನ್ನು ಆಶೀರ್ವಾದ ಮಾಡಿದ್ದಾರೆ' ಎಂದು ಅವರು ತಿಳಿಸಿದರು.

ಕಳೆದ ಐದು ವರ್ಷಗಳಲ್ಲಿ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ₹22,000 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದರು.

2019ರಲ್ಲಿ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದರು. ಈ ಬಾರಿ ಅಮಿತ್ ಶಾ ವಿರುದ್ಧ ಸೋನಲ್ ಪಟೇಲ್ ಅವರನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT