ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ತಾರಾ ಪ್ರಚಾರಕರ ಪಟ್ಟಿಯಿಂದ ಉಮಾ ಭಾರತಿಗೆ ಕೋಕ್: ಪಚೌರಿಗೆ ಸ್ಥಾನ

Published 27 ಮಾರ್ಚ್ 2024, 10:16 IST
Last Updated 27 ಮಾರ್ಚ್ 2024, 10:16 IST
ಅಕ್ಷರ ಗಾತ್ರ

ಭೋಪಾಲ್: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರನ್ನು ಕೈಬಿಡಲಾಗಿದೆ. ಕಾಂಗ್ರೆಸ್‌ನಿಂದ ಇತ್ತೀಚೆಗೆ ಬಿಜೆಪಿ ಸೇರಿದ ಸುರೇಶ್ ಪಚೌರಿಗೆ ಸ್ಥಾನ ಕಲ್ಪಿಸಲಾಗಿದೆ.

ಪ್ರಸಕ್ತ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಒಳಗೊಂಡಂತೆ ಒಟ್ಟು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ. 2003ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನ ದಡಕ್ಕೆ ತಂದಿದ್ದ ಉಮಾ ಭಾರತಿ ಅವರು 2023ರ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಮುಂದಿನ ಎರಡು ವರ್ಷಗಳ ಕಾಲ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದ ಉಮಾ ಭಾರತಿ, ಗಂಗಾ ನದಿಯ ಪುನರುಜ್ಜೀವನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಹೇಳಿದ್ದರು. ಜತೆಗೆ ತಾವು ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ, ಛತ್ತೀಸಗಢದ ವಿಷ್ಣು ದೇವ್ ಸಾಯ್ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವ ತಾರಾ ಪ್ರಚಾರಕರಾಗಿದ್ದಾರೆ. 

ಇವರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಧ್ಯ ಪ್ರದೇಶದ ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮಾ, ಕೇಂದ್ರ ಸಚಿವ ರಾಜನಾಥ ಸಿಂಗ್, ನಿತಿನ್ ಗಡ್ಕರಿ, ಫಗ್ಗನ್ ಸಿಂಗ್ ಕುಲಸ್ತೆ, ಜ್ಯೋತಿರಾದಿತ್ಯ ಸಿಂಧಿಯಾ, ಸ್ಮೃತಿ ಇರಾನಿ ಹಾಗೂ ವೀರೇಂದ್ರ ಕುಮಾರ್ ಖಾತಿಕ್ ಅವರ ಹೆಸರೂ ಪಟ್ಟಿಯಲ್ಲಿದೆ. 

ಮಧ್ಯ ಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ, ರಾಜೇಂದ್ರ ಶುಕ್ಲಾ, ಮಹಾರಾಷ್ಟ್ರದ ದೇವೇಂದ್ರ ಫಡಣವಿಸ್, ಉತ್ತರ ಪ್ರದೇಶದ ಕೇಶವ ಪ್ರಸಾದ್ ಮೌರ್ಯ, ಶಿವರಾಜ್ ಸಿಂಗ್ ಚವ್ಹಾಣ್, ಪ್ರಹ್ಲಾದ್ ಪಟೇಲ್, ಕೈಲಾಶ್ ವಿಜಯವರ್ಗೀಯ, ಐದಾಲ್ ಸಿಂಗ್‌ ಕಾನ್ಸಾ ಹಾಗೂ ತುಳಸಿ ಸಿಲ್ಆವತ್ ಅವರೂ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

29 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಒಟ್ಟು ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ. ಏ. 19, ಏ. 26, ಮೇ 7 ಹಾಗೂ ಮೇ 13ರಂದು ಮತದಾನ ನಡೆಯಲಿದೆ. 

2019ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ಕಾಂಗ್ರೆಸ್‌ ಈವರೆಗೂ 22 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT