ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

J & K ವಿಧಾನಸಭಾ ಚುನಾವಣೆಗೆ ಸಿದ್ಧತೆ ಶೀಘ್ರದಲ್ಲಿ ಆರಂಭ: CEC ರಾಜೀವ್ ಕುಮಾರ್

Published 25 ಮೇ 2024, 10:20 IST
Last Updated 25 ಮೇ 2024, 10:20 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮತದಾರರ ಉತ್ಸಾಹದಿಂದ ಮತದಾನ ಪ್ರಮಾಣ ಹೆಚ್ಚಾಗಿದ್ದು, ಶೀಘ್ರದಲ್ಲಿ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು’ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅವರದ್ದೇ ಆದ ಸರ್ಕಾರದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಚುನಾವಣೆ ನಡೆಸಲಾಗುವುದು. ಅಲ್ಲಿನ ಯುವಜನತೆ, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರ ಉತ್ಸಾಹದ ಪಾಲ್ಗೊಳ್ಳುವಿಕೆ ನನ್ನ ಕಿವಿಗಳಿಗೆ ಸಂಗೀತದಂತೆ ಕೇಳಿಸುತ್ತಿದೆ. ಇದು ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠವಾಗುತ್ತಾ ಸಾಗಿರುವ ಸಂಕೇತವಾಗಿದೆ’ ಎಂದಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಲೋಕಸಭಾ ಚುನಾವಣೆ ಘೋಷಣೆ ಸಂದರ್ಭದಲ್ಲಿ ಏಕಕಾಲಕ್ಕೆ ವಿಧಾನಸಭಾ ಚುನಾವಣೆ ನಡೆಸುವುದು ಅಸಾಧ್ಯ ಎಂದು ರಾಜೀವ್ ಕುಮಾರ್ ಹೇಳಿದ್ದರು. ಇದಕ್ಕೆ, ಭದ್ರತೆ ಹಾಗೂ ಸರಕು ಸಾಗಣೆಯ ಸಮಸ್ಯೆಯ ಕಾರಣವನ್ನು ಅವರು ನೀಡಿದ್ದರು.

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್‌ನಲ್ಲಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ. ಕ್ಷೇತ್ರ ಮರುವಿಂಗಡನೆ ನಂತರ ವಿಧಾನಸಭೆಯಲ್ಲಿ 83 ಸದಸ್ಯ ಸ್ಥಾನಗಳು 90ಕ್ಕೆ ಏರಿಕೆಯಾಗಿವೆ. ಇದು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊರತುಪಡಿಸಿದ್ದಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT