ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟರಿಗೆ ಶೇ 24ರಷ್ಟು ಮೀಸಲು: ಸಿದ್ದರಾಮಯ್ಯ

Published 2 ಏಪ್ರಿಲ್ 2024, 14:51 IST
Last Updated 2 ಏಪ್ರಿಲ್ 2024, 14:51 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಸಮುದಾಯಗಳಿಗೆ ಶೇ 24.1 ಮೀಸಲನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ವಿವಿಧ ಪಕ್ಷಗಳ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು. ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಜತೆಗೂ ಮಾತನಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ’ ಎಂದು ತಿಳಿಸಿದರು.

‘ ಕರ್ನಾಟಕದಲ್ಲಿ ಎಸ್‌ಇಪಿ, ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಜನಸಂಖ್ಯೆಗೆ ಅನುಗುಣವಾಗಿ ಆಯಾ ಸಮುದಾಯಗಳಿಗೆ ಅನುದಾನ ಖರ್ಚಾಗಬೇಕು ಎಂಬುದು ಇದರ ಉದ್ದೇಶ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳಿಗೆ ಬರುತ್ತಿದ್ದ ವಿದ್ಯಾರ್ಥಿವೇತನವನ್ನೇ ನಿಲ್ಲಿಸಿತು’ ಎಂದು ಅವರು ದೂರಿದರು.

‘ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಆದರೆ ಬಿಜೆಪಿ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಹಾಗೇನಾದರೂ ಆದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಸಂವಿಧಾನ ಬದಲಾದರೆ ದೇಶದಲ್ಲಿ ರಕ್ತಪಾತವಾಗುತ್ತದೆ’ ಎಂದು ಎಚ್ಚರಿಸಿದರು.

‘ಆರ್‌ಎಸ್‌ಎಸ್‌ನವರು ತಮ್ಮ ಗರ್ಭಗುಡಿಗೆ ದಲಿತರನ್ನು ಬಿಟ್ಟುಕೊಳ್ಳುವುದಿಲ್ಲ. ದೇಗುಲಕ್ಕೂ ಅಷ್ಟು ಸುಲಭಕ್ಕೆ ದಲಿತರಿಗೆ ಪ್ರವೇಶ ನೀಡುವುದಿಲ್ಲ. ಬಿಜೆಪಿಗೆ ಮನುಸ್ಮೃತಿ ಬಗ್ಗೆ ನಂಬಿಕೆ ಇದೆ ಹೊರತು ಸಂವಿಧಾನದ ಬಗ್ಗೆ ಅಲ್ಲ. ಅವರದ್ದು ಗುಲಾಮಗಿರಿ ಮನಸ್ಥಿತಿ. ಇಂತಹ ಗುಲಾಮಗಿರಿ ಹೋಗಿ ವೈಚಾರಿಕ ಶಿಕ್ಷಣ ಎಲ್ಲರಿಗೂ ಸಿಗಬೇಕು’ ಎಂದು ಆಶಿಸಿದರು.

ಸಂಸದ ವಿ. ಶ್ರೀನಿವಾಸ ಪ್ರಸಾದ್ ಸಹೋದರ ವಿ.ರಾಮಸ್ವಾಮಿ, ಅವರ ಪುತ್ರ ಭರತ್ ರಾಮಸ್ವಾಮಿ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್, ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್ ಕುಮಾರ್, ನಗರ ಘಟಕದ ಅಧ್ಯಕ್ಷ ಆರ್. ಮೂರ್ತಿ, ಎಂ.ಪ್ರದೀಪ್ ಕುಮಾರ್, ಕೆ.ಎಸ್.ಶಿವರಾಂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT