ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ಕೈ ತಪ್ಪಿದ್ದು ಅನ್ಯಾಯ, ಆದರೆ ವರಿಷ್ಠರ ನಿರ್ಧಾರಕ್ಕೆ ಬದ್ಧ: ಅನಿಲ ಬೆನಕೆ

Last Updated 17 ಏಪ್ರಿಲ್ 2023, 11:11 IST
ಅಕ್ಷರ ಗಾತ್ರ

ಬೆಳಗಾವಿ: ‘ಐದು ವರ್ಷಗಳ ನನ್ನ ಅವಧಿಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಯಾವುದೇ ಜಾತಿ ಭೇದ ಮಾಡದೇ, ಯಾವುದೇ ಗಲಾಟೆಗಳಿಗೆ ಆಸ್ಪದ ಕೊಡದೇ ಕೆಲಸ ಮಾಡಿದ್ದೇನೆ. ಆದರೂ ಬಿಜೆಪಿ ಡಾ.ರವಿ ಪಾಟೀಲ ಅವರಿಗೆ ಟಿಕೆಟ್‌ ನೀಡಿದೆ. ವರಿಷ್ಠರ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ. ಬಿಜೆಪಿ ಗೆಲುವಿಗೆ ಎಲ್ಲರೂ ಶ್ರಮಿಸುತ್ತೇವೆ’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅನಿಲ್ ಬೆನಕೆ ಅಭ್ಯರ್ಥಿ ಎಂದುಕೊಂಡು ಅವರ ಗೆಲುವಿಗೆ ಶ್ರಮಿಸಬೇಕು. ನಾನು ಬೇರೆ ಬೇರೆ ಪಕ್ಷಗಳಿಗೆ ಹೋಗುತ್ತೇನೆ ಎಂದು ಸುದ್ದಿ ಹರಡಿದೆ. ಅದೆಲ್ಲ ಸುಳ್ಳು’ ಎಂದರು.

‘ಕಳೆದ 30 ವರ್ಷಗಳಿಂದ ಬಿಜೆಪಿ ಸಂಘಟನೆ ಮಾಡಿ ಗೆಲ್ಲಿಸಲು ಪ್ರಯತ್ನ ಮಾಡಿದ್ದೆ. ಆದರೆ, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿರಲಿಲ್ಲ. 2018ರಲ್ಲಿ ಜನ ನನ್ನನ್ನು ಗೆಲ್ಲಿಸಿದರು. ಅದಕ್ಕೂ ಮುನ್ನ ಎರಡು ಬಾರಿ ನನಗೆ ಟಿಕೆಟ್‌ ತಪ್ಪಿತ್ತು. ಆಗಲೂ ನಾನು ಪಕ್ಷ ಬಿಟ್ಟು ಹೋಗಿಲ್ಲ. ಈಗಲೂ ವೈಯಕ್ತಿಕವಾಗಿ ನನಗೆ ಅನ್ಯಾಯವಾಗಿದ್ದು ನಿಜ. ಆದರೆ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ’ ಎಂದು ಹೇಳಿದರು.

ಮುಂಬರುವ ಲೋಕಸಭೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಹಿರಿಯರನ್ನು ಭೇಟಿಯಾಗಿದ್ದೇನೆ. ಕಾರ್ಯಕರ್ತರಾಗಿ ಪಕ್ಷಕ್ಕಾಗಿ ದುಡಿಯಿರಿ ಎಂದಿದ್ದಾರೆ. ನಾನು ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡುತ್ತೇನೆ. ಮುಂದಿನ ವಿಚಾರ ಈಗ ಮಾತನಾಡುವುದಿಲ್ಲ’ ಎಂದರು‌.

ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ.ಝಿರಲಿ ಮಾತನಾಡಿ, ‘ಲಕ್ಷ್ಮಣ ಸವದಿ ಹಾಗೂ ಜಗದೀಶ ಶೆಟ್ಟರ್ ಪಕ್ಷ ಬಿಟ್ಟಿದ್ದು ಬೇಸರ ತಂದಿದೆ. ಆದರೆ, ಪಕ್ಷಾಂತರಕ್ಕೆ ಕಾರ್ಯಕರ್ತರು ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.

ಶಾಸಕ ಅಭಯ ಪಾಟೀಲ ಮಾತನಾಡಿ, ‘ಬಿಜೆಪಿ ಕಾರ್ಯಕರ್ತರ ಪಕ್ಷ. ಬೆಳಗಾವಿ ಉತ್ತರ, ದಕ್ಷಿಣ ಹಾಗೂ ಗ್ರಾಮಾಂತರ ಮೂರು ಕ್ಷೇತ್ರಗಳಲ್ಲಿ ಕಾರ್ಯಕರ್ತರ ಬಲದಿಂದ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಮಹಾರಾಷ್ಟ್ರ ಹಾಗೂ ಬೆಳಗಾವಿ ಚುನಾವಣಾ ಉಸ್ತುವಾರಿ, ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್, ಸಂಸದೆ ಮಂಗಲಾ ಅಂಗಡಿ, ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT