ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲಿನ ಹೊಣೆ ಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಅಶೋಕ

Published 4 ಜೂನ್ 2024, 16:36 IST
Last Updated 4 ಜೂನ್ 2024, 16:36 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಭಾವುಕ ವ್ಯಕ್ತಿ. ಆದ್ದರಿಂದ ಅವರು ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಸೇರಿ ಎನ್‌ಡಿಎಗೆ ಶೇ 51.66 ರಷ್ಟು ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ಗೆ ಶೇ 45.43ರಷ್ಟು ಮತ ಬಂದಿದೆ. ಎರಡಂಕಿ ದಾಟುತ್ತೇವೆ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಳಿದ್ದರು. ಆದರೆ ಗುರಿ ಮುಟ್ಟುವಲ್ಲಿ ಅವರು ವಿಫಲರಾಗಿದ್ದಾರೆ ಎಂದರು.

‘ಮುಖ್ಯಮಂತ್ರಿಯವರ ತವರು ಜಿಲ್ಲೆ ಮೈಸೂರಿನಲ್ಲಿ ನಮ್ಮ ಅಭ್ಯರ್ಥಿ 1.39 ಲಕ್ಷ ಅಂತರದಿಂದ ಗೆದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ 2.68 ಲಕ್ಷ ಅಂತರಗಳಿಂದ ಗೆದ್ದಿದ್ದಾರೆ’ ಎಂದರು.

‘ಎನ್‌ಡಿಎದಲ್ಲಿ ಯಾವುದೇ ಒಡಕಿಲ್ಲ. ಇಂಡಿಯಾ ಒಕ್ಕೂಟದಿಂದಲೇ ಕೆಲವರು ಎನ್‌ಡಿಎಗೆ ಬರುವ ಸಾಧ್ಯತೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದು ಹೇಳಿದರು.

ಮೂರನೇ ಬಾರಿಗೆ ಬಹುಮತ ಐತಿಹಾಸಿಕ: ವಿಜಯೇಂದ್ರ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸತತವಾಗಿ ಮೂರನೇ ಬಾರಿಗೆ ಬಹುಮತ ಪಡೆದಿದೆ. ಕಾಂಗ್ರೆಸೇತರ ಪಕ್ಷವೊಂದು ಈ ಸಾಧನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸೇರಿ 19 ಸ್ಥಾನಗಳನ್ನು ಗೆದ್ದುಕೊಂಡಿದ್ದೇವೆ. ಗ್ಯಾರಂಟಿಗಳ ಮೂಲಕ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್‌ಗೆ ಮುಖಭಂಗವಾಗಿದೆ ಎಂದು ಅವರು ವಿಶ್ಲೇಷಿಸಿದರು. ಗ್ಯಾರಂಟಿ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿತ್ತು. ಇದೆಲ್ಲವನ್ನೂ ಮೀರಿ ರಾಜ್ಯದ ಪ್ರಜ್ಞಾವಂತ ಮತದಾರರು ದೇಶದ ಭವಿಷ್ಯ ರೂಪಿಸುವ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಕಾರಣಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದರು. ವಿಜಯೋತ್ಸವ: ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್‌ ಸೇರಿ ಹೆಚ್ಚು ಮತಗಳನ್ನು ಗೆದ್ದ ಕಾರಣಕ್ಕೆ ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರ ವಿಜಯೋತ್ಸವವನ್ನು ಆಚರಿಸಿ ಸಿಹಿ ಹಂಚಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬಿಜೆಪಿ ನಾಯಕ ಸಿ.ಟಿ.ರವಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT