ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯ ಸೋಲಿನ ಭಯದಿಂದ ಕಾಂಗ್ರೆಸ್ ಬ್ಯಾಂಕ್ ಖಾತೆ ಮುಟ್ಟುಗೋಲು: ಸಿದ್ದರಾಮಯ್ಯ

Published 22 ಮಾರ್ಚ್ 2024, 9:34 IST
Last Updated 22 ಮಾರ್ಚ್ 2024, 9:34 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಇದೆ. ಅದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ' ಎಂದರು.

ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ.‌ ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದರು.

ಮನುಸ್ಮೃತಿಯ ಮಾರಕ‌ ಮನಸ್ಥಿತಿ

ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಮಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT