ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪಕ್ಷದವರಿಗೆ ಪ್ರವೇಶ ನಿರ್ಬಂಧಿಸಿ: ಕುರುಬೂರ ಶಾಂತಕುಮಾರ್

Published 10 ಏಪ್ರಿಲ್ 2024, 15:45 IST
Last Updated 10 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೆ, ಈಗ ಮತಯಾಚನೆಗೆ ಬರುತ್ತಿರುವ ರಾಜಕೀಯ ಪಕ್ಷಗಳಿಗೆ ಛೀಮಾರಿ ಹಾಕಿ. ರಾಜಕಾರಣಿಗಳು ನಿಮ್ಮ ಹಳ್ಳಿ ಪ್ರವೇಶಿಸದಂತೆ ನಿರ್ಬಂಧಿಸಿ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬರಗಾಲದಲ್ಲಿ ಚುನಾವಣೆ–ರೈತರ ದಿಕ್ಸೂಚಿ’ ವಿಭಾಗಮಟ್ಟದ ಸಭೆ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಅಧಿಕಾರ ಹಿಡಿಯಲು ಪೈಪೋಟಿ ನಡೆಸಿದ್ದಾರೆ. ಕುಟುಂಬ ರಾಜಕಾರಣ ವ್ಯಾಪಕವಾಗಿದೆ. ರಾಜ್ಯದಲ್ಲಿ ಬರ ಆವರಿಸಿದ್ದರೂ, ರೈತರ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಧಿಕಾರಿಗಳು ಚುನಾವಣೆ ನೆಪ ನೀಡಿ, ರೈತರನ್ನು ಕಡೆಗಣಿಸಿದ್ದಾರೆ. ಹೀಗಾಗಿ ನಿಮ್ಮೂರಿಗೆ ರಾಜಕೀಯ ಪಕ್ಷಗಳ ಮುಖಂಡರು ಬಾರದಂತೆ ತಡೆಯಬೇಕು’ ಎಂದು ಹೇಳಿದರು.

‘ಈಗ ಕೆಲವು ಜಿಲ್ಲೆಗಳಲ್ಲಿ ಸಭೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಭೆ ನಡೆಯಲಿವೆ. ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಿದ ನಂತರ, ಮತದಾನ ಬಹಿಷ್ಕರಿಸಬೇಕೇ ಅಥವಾ ಬೇಡವೇ ಎಂದು ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ರೈತರ ಕಷ್ಟ ಕಾಲದಲ್ಲಿ ಜಗಳವಾಡುತ್ತ, ಮನರಂಜನೆ ನೀಡುತ್ತಿದ್ದಾರೆ. ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ. ಈ ನಾಟಕ ಬಿಟ್ಟು, ಪರಿಹಾರ ನೀಡಿ. ಇಲ್ಲವೆ ಮತ ಕೇಳಲು ಬರಬೇಡಿ’ ಎಂದರು.

‘ಇಂದು ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಬರಗಾಲದಿಂದಾಗಿ ನೀರು ಇಲ್ಲದೆ, ಬೆಳೆಗಳೆಲ್ಲ ಒಣಗುತ್ತಿವೆ. ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲವೆ?’ ಎಂದು ಪ್ರಶ್ನಿಸಿದರು.

‘ರಾಜ್ಯದಾದ್ಯಂತ 78 ಸಕ್ಕರೆ ಕಾರ್ಖಾನೆಗಳು ₹2,600 ಕೋಟಿ ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿವೆ. ಅದಕ್ಕೆ ಶೇ 15ರಷ್ಟು ಬಡ್ಡಿ ಸೇರಿಸಿ ಪಾವತಿಸುವ ಕುರಿತಾಗಿ ಕಬ್ಬು ಹಾಗೂ ಸಕ್ಕರೆ ಅಭಿವೃದ್ಧಿ ಆಯುಕ್ತರು ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ, ಬಲ್ಲೂರ್ ರವಿಕುಮಾರ್, ಗುರುಸಿದ್ದಪ್ಪ ಕೋಟಗಿ, ಎಸ್.ಬಿ.ಸಿದ್ನಾಳ, ಮಹೇಶ್ ಬೆಳಗಾವಕರ, ಪರಶುರಾಮ ಎತ್ತಿನಗುಡ್ಡ, ಕುಮಾರ ಭೂಬಾಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT