ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡಾಯ ಭಾರಿ, ಗುಳೆಗೆ ತಯಾರಿ: ಬಿಜೆಪಿಯಲ್ಲಿ ಶುರುವಾದ ರಾಜೀನಾಮೆ ಪರ್ವ

ಬಿಜೆಪಿಯ ವರಿಷ್ಠರಿಗೆ ತಲೆನೋವು l ರಾಜ್ಯದ ಹಲವೆಡೆ ಪ್ರತಿಭಟನೆಯ ಕಿಚ್ಚು l ಶುರುವಾದ ರಾಜೀನಾಮೆ ಪರ್ವ
Last Updated 13 ಏಪ್ರಿಲ್ 2023, 0:15 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ, ರಾಜ್ಯದ ಹಲವು ಕಡೆಗಳಲ್ಲಿ ಬಂಡಾಯ ಭುಗಿಲೆದ್ದಿದೆ. ಪ್ರತಿಭಟನೆ, ಆಕ್ರೋಶ, ರಾಜೀನಾಮೆ ಪರ್ವ ಆರಂಭವಾಗಿದ್ದು, ಬಂಡಾಯ ಶಮನಕ್ಕೆ ಬಿಜೆಪಿಯ ಕೇಂದ್ರ ಮತ್ತು ರಾಜ್ಯದ ವರಿಷ್ಠರು ಹೆಣಗಾಡುವ ಸ್ಥಿತಿ ಬಂದೊದಗಿದೆ.

ನಿಷ್ಠುರ ಕ್ರಮ ತೆಗೆದುಕೊಳ್ಳುವಷ್ಟುಬಲ ಇರುವ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ತಲೆಬಾಗುತ್ತಾರೆ ಎಂಬ ಅಂದಾಜಿನಲ್ಲಿದ್ದ ಬಿಜೆಪಿ ನಾಯಕರು ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ವರಿಷ್ಠರು ನಿರೀಕ್ಷೆಯನ್ನೂ ಮಾಡದ ರೀತಿಯಲ್ಲಿ ಆಕ್ರೋಶ ಪುಟಿ
ದೆದ್ದಿದೆ. ಬೀದರ್‌ನಿಂದ ಚಾಮರಾಜನಗರದವರೆಗೆ ಆಕಾಂಕ್ಷಿಗಳು ಸಿಡಿಮಿಡಿಗೊಂಡಿದ್ದು, ಬಿಜೆಪಿಯನ್ನು ಆತಂಕಕ್ಕೆ ದೂಡಿದೆ.

ಟಿಕೆಟ್‌ ಸಿಗದೇ ನಿರಾಶೆಗೊಂಡವರು ಅನ್ಯ ಪಕ್ಷಗಳತ್ತ ವಲಸೆ ಆರಂಭಿಸಿದ್ದಾರೆ. ಸಚಿವ ಎಸ್‌.ಅಂಗಾರ ಅವರು ಅಸಮಾಧಾನದಿಂದಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಪರಿಷತ್‌ ಸದಸ್ಯ ಆರ್‌.ಶಂಕರ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನಿವೃತ್ತಿಗೆ ಸೂಚನೆ ನೀಡಿದ ಬೆನ್ನಲ್ಲೇ ಬಂಡಾಯದ ಬಾವುಟ ಹಾರಿಸಿದ್ದ ಶಾಸಕ ಜಗದೀಶ ಶೆಟ್ಟರ್ ಅವರನ್ನು ಬುಧವಾರ ದೆಹಲಿಗೆ ಕರೆಸಿಕೊಂಡು ವರಿಷ್ಠರು ಮಾತುಕತೆ ನಡೆಸಿದರೆ, ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್ಪ ಅವರ ಬೆಂಬಲಿಗ ಪಾಲಿಕೆ ಸದಸ್ಯರು ರಾಜೀನಾಮೆಯನ್ನು ನೀಡುವ ಮೂಲಕ ಒತ್ತಡದ ತಂತ್ರವನ್ನು ಅನುಸರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಜಿಗಿಯಲು ಸಿದ್ಧತೆ ಮಾಡಿಕೊಂಡಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

ಗುರುವಾರ ಸಂಜೆ ಮುರುಘೇಂದ್ರ ಶಿವಯೋಗಿಗಳ ಮಠದಲ್ಲಿ ಸಭೆ ಕರೆದಿದ್ದೇನೆ. ನನ್ನ ಜನರಿಂದ ಮಾರ್ಗದರ್ಶನ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರ ಸಚಿವರು ಅವರ ಮನವೊಲಿಸುವ ಕಾರ್ಯಕ್ಕೆ ಕೈಹಾಕಿದ್ದಾರೆ.

ಉಡುಪಿಯ ಶಾಸಕ ರಘುಪತಿ ಭಟ್‌ ಅವರು ಕಣ್ಣೀರು ಸುರಿಸಿ, ‘ನಾನು ಬ್ರಾಹ್ಮಣ ಆಗಿರುವ ಕಾರಣಕ್ಕೆ ಅವಕಾಶ ನಿರಾಕರಿಸಲಾಗಿದೆ. ಜಾತಿಯ ಕಾರಣಕ್ಕೆ ಟಿಕೆಟ್‌ ಕೊಡಲು ಸಾಧ್ಯವಿಲ್ಲ ಎಂದು ಮೊದಲೇ ಹೇಳಿದ್ದರೆ, ಈಶ್ವರಪ್ಪ ಅವರಂತೆ ಸ್ವಯಂ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಶಾಸಕ ಅನಿಲ್‌ ಬೆನಕೆ, ರಾಮದುರ್ಗದಲ್ಲಿ ಶಾಸಕ ಮಹಾದೇವಪ್ಪ ಅವರ ಬೆಂಬಲಿಗರು ಸಿಟ್ಟಿಗೆದ್ದು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೈಲಹೊಂಗಲ ಕ್ಷೇತ್ರದಲ್ಲಿ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದ ಡಾ.ವಿಶ್ವನಾಥ ಪಾಟೀಲ, ಕುಂದಗೋಳದ ಆಕಾಂಕ್ಷಿ ಎಸ್.ಐ.ಚಿಕ್ಕನಗೌಡ ಪಕ್ಷದಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಜೇವರ್ಗಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಳ್ಳಾರಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾರಕಕ್ಕೇರಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಯಾಗಿದ್ದ ಕೆ.ಎಸ್. ದಿವಾಕರ್‌ಗೆ ಟಿಕೆಟ್ ಸಿಕ್ಕಿಲ್ಲ. ಶಿಲ್ಪಾ ರಾಘವೇಂದ್ರಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಿವಾಕರ್ ತೀವ್ರ ಅಸಮಾಧಾನ
ಗೊಂಡಿದ್ದಾರೆ.

ತುಮಕೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ, ಟಿಕೆಟ್‌ ಕೈ ತಪ್ಪಿದ್ದರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಎ ಬಂದಿದ್ದ ಮಾಜಿ
ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಅವರು ಬಂಡಾಯದ ಬಾವುಟ ಹಾರಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ, ಬ್ಯಾಟರಾಯನಪುರ, ಬಸವನಗುಡಿ, ನೆಲಮಂಗಲದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ನೆಲಮಂಗಲದಲ್ಲಿ ಮಾಜಿ ಶಾಸಕ ಎಂ.ವಿ. ನಾಗರಾಜು ಪಕ್ಷದ ಅಭ್ಯರ್ಥಿ ವಿರುದ್ಧ ಕೆಲಸ ಮಾಡಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT