ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ |ರಾಜ್ಯದ 14 ಕ್ಷೇತ್ರ: 247 ಮಂದಿ ಕಣದಲ್ಲಿ

Published 8 ಏಪ್ರಿಲ್ 2024, 23:45 IST
Last Updated 8 ಏಪ್ರಿಲ್ 2024, 23:45 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 26ರಂದು ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಒಟ್ಟು 358 ಮಂದಿ ನಾಮಪತ್ರ ಸಲ್ಲಿಸಿದ್ದರು. 419 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 74 ನಾಮಪತ್ರಗಳನ್ನು ಪರಿಶೀಲನೆ ವೇಳೆ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. 300 ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕೃತವಾಗಿದ್ದವು. ಶನಿವಾರ ಒಬ್ಬರು ಮತ್ತು ಸೋಮವಾರ 52 ಮಂದಿ ನಾಮಪತ್ರಗಳನ್ನು ಹಿಂಪಡೆದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪೈಕಿ 226 ಮಂದಿ ಪುರುಷರು ಹಾಗೂ 26 ಮಹಿಳೆಯರಿದ್ದಾರೆ. ಉಡುಪಿ–ಚಿಕ್ಕಮಗಳೂರು, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ. ಮೊದಲ ಹಂತದ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಕಣದಲ್ಲಿಲ್ಲ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ 29 ಅಭ್ಯರ್ಥಿಗಳಿದ್ದಾರೆ. ನಂತರದ ಸ್ಥಾನಗಳಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳಿವೆ. ಬೆಂಗಳೂರು ಉತ್ತರ ಅತ್ಯಧಿಕ ಸಂಖ್ಯೆಯ ಮಹಿಳಾ ಅಭ್ಯರ್ಥಿಗಳು ಕಣದಲ್ಲಿರುವ ಕ್ಷೇತ್ರವೂ ಹೌದು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ (9) ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಡುಪಿ–ಚಿಕ್ಕಮಗಳೂರು, ಮಂಡ್ಯ ಮತ್ತು ಚಾಮರಾಜನಗರ ಕ್ಷೇತ್ರಗಳು ಅತಿ ಕಡಿಮೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿವೆ.

ನೇರ ಸ್ಪರ್ಧೆಯೇ ಹೆಚ್ಚು: 14 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ನ ಅಭ್ಯರ್ಥಿಗಳಿದ್ದಾರೆ. ಬಿಜೆಪಿ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಕಣದಲ್ಲಿದೆ.

11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌–ಬಿಜೆಪಿ ಸ್ಪರ್ಧೆ ಇದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌– ಜೆಡಿಎಸ್‌ ನೇರ ಪೈಪೋಟಿಯಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT