ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Published 23 ಏಪ್ರಿಲ್ 2024, 19:54 IST
Last Updated 23 ಏಪ್ರಿಲ್ 2024, 19:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ಈ 14 ಕ್ಷೇತ್ರಗಳಲ್ಲಿ ಮಾರ್ಚ್‌ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಅದಕ್ಕೂ ಮೊದಲೇ ಚುನಾವಣಾ ಪ್ರಚಾರ ಬಿರುಸಾಗಿತ್ತು. 11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌–ಬಿಜೆಪಿ ನೇರ ಹಣಾಹಣಿ ನಡೆಸುತ್ತಿದ್ದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಮಧ್ಯೆ ಸ್ಪರ್ಧೆ ಇದೆ. ಬಿಜೆಪಿ, ಕಾಂಗ್ರೆಸ್‌ನ ಕೇಂದ್ರ, ರಾಜ್ಯಗಳ ಘಟಾನುಘಟಿ ನಾಯಕರು ಹಲವು ಸುತ್ತಿನ ಪ್ರಚಾರ ನಡೆಸಿದ್ದಾರೆ. ಜೆಡಿಎಸ್‌ ನಾಯಕರೂ ಒಕ್ಕಲಿಗ ಮತದಾರರ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಎಡೆಬಿಡದೆ ಪ್ರಚಾರ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬಹಿರಂಗ ಸಭೆಯ ಮೂಲಕ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ. ಮಂಗಳೂರಿನಲ್ಲಿ ರೋಡ್‌ ಶೋ ನಡೆಸಿ ಕರಾವಳಿಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿನಲ್ಲಿ ಸರಣಿ ಸಭೆಗಳ ಮೂಲಕ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಜತೆಯಲ್ಲೇ, ಬಹಿರಂಗ ಸಭೆಯಲ್ಲೂ ಮತ ಯಾಚಿಸಿದ್ದರು.

ಚನ್ನಪಟ್ಟಣದಲ್ಲಿ ರೋಡ್‌ ಶೋ ನಡೆಸುವ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರ ಚುನಾವಣಾ ಪ್ರಚಾರದ ಕಾವು ಹೆಚ್ಚಿಸಿದ್ದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಮತದಾರರನ್ನು ಹಸ್ತದತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಚಿತ್ರದುರ್ಗ, ಬೆಂಗಳೂರಿನಲ್ಲಿ ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿಗಳ ಬೆಂಬಲಕ್ಕೆ ನಿಲ್ಲುವಂತೆ ಮತದಾರರ ಮನವೊಲಿಸುವ ಯತ್ನ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಒಕ್ಕಲಿಗ ಮತದಾರರ ಬಾಹುಳ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರ ಜತೆ ವೇದಿಕೆ ಹಂಚಿಕೊಂಡು ಎರಡೂ ಪಕ್ಷಗಳ ಮತ ಒಗ್ಗೂಡಿಸುವ ಕಸರತ್ತು ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಾವೇ ಅಭ್ಯರ್ಥಿಯಾಗಿರುವ ಮಂಡ್ಯ ಕ್ಷೇತ್ರದ ಜತೆ ಇತರೆಡೆಗೂ ಪ್ರಚಾರ ನಡೆಸಿದ್ದಾರೆ.

ಬುಧವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಗುರುವಾರ ಮನೆ, ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಕೊನೆಯ ದಿನದ ಬಹಿರಂಗ ಪ್ರಚಾರದ ಅವಕಾಶ ಬಳಸಿಕೊಳ್ಳಲು ಅಭ್ಯರ್ಥಿಗಳು, ಅವರ ಬೆಂಬಲಿಗರು ತರಹೇವಾರಿ ಪ್ರಯತ್ನಗಳನ್ನು ಆರಂಭಿಸಿದ್ದಾರೆ.

ಎರಡನೇ ಹಂತದಲ್ಲಿ ಪ್ರಚಾರ ಬಿರುಸು

ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಮವಾರ ಚುನಾವಣಾ ಕಣ ಅಂತಿಮಗೊಂಡಿತ್ತು. ಮಂಗಳವಾರದಿಂದ ಪ್ರಚಾರ ಬಿರುಸು ಪಡೆದಿದೆ.

ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಘಟಾನುಘಟಿ ನಾಯಕರು ಶುಕ್ರವಾರದಿಂದ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸಜ್ಜಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT