ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಂಕ್ ಖಾತೆ ಸ್ಥಗಿತ | ಸರ್ವಾಧಿಕಾರಿ ನಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 21 ಮಾರ್ಚ್ 2024, 15:19 IST
Last Updated 21 ಮಾರ್ಚ್ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು’ ಎಂದು ಚುನಾವಣಾ ಆಯೋಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಲೋಕಸಭಾ ಚುನಾವಣೆಯ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹಿಸಿರುವ ಹಣವೇ ಹೊರತು ದೊಡ್ಡ ಉದ್ಯಮಪತಿಗಳದ್ದಲ್ಲ’ ಎಂದಿದ್ದಾರೆ.

‘ಚುನಾವಣಾ ಬಾಂಡ್‌ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ, ಕಾಂಗ್ರೆಸ್ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡರೂ ವಾಸ್ತವ ಸ್ಥಿತಿ ಏನು ಎಂಬುದು ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನರೇಂದ್ರ ಮೋದಿ ಅವರ ಹಿಂದಿರುವ ‘ದುಷ್ಟ ಶಕ್ತಿ’ಯು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT