ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಗ್ಯಾರಂಟಿ ಮುಂದಿಟ್ಟು ಮತ ಸೆಳೆಯಲು ‘ಕೈ’ ತಂತ್ರ

Published 20 ಮಾರ್ಚ್ 2024, 23:30 IST
Last Updated 20 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಲೋಕಸಭಾ ಚುನಾವಣೆಯಲ್ಲಿ ಜನಬೆಂಬಲ ಗಳಿಸುವ ಪ್ರಬಲ ಅಸ್ತ್ರಗಳನ್ನಾಗಿ ಬಳಸಲು ಕಾಂಗ್ರೆಸ್‌ ಮುಂದಾಗಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡೇ ಮತ ಸೆಳೆಯುವ ಕಾರ್ಯತಂತ್ರ ರೂಪಿಸುತ್ತಿದೆ.

ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಅನ್ನ ಭಾಗ್ಯ ಯೋಜನೆಗಳ ಫಲಾನುಭವಿಗಳನ್ನು ಮನವೊಲಿಸಿ ಮತಗಳಾಗಿ ಪರಿವರ್ತಿಸುವ ಚಿಂತನೆ ಕಾಂಗ್ರೆಸ್‌ ಪಾಳೆಯದಲ್ಲಿ ಜೋರಾಗಿ ನಡೆದಿದೆ. ರಾಜ್ಯ ಸರ್ಕಾರ ವಿವಿಧ ಮೂಲಗಳಿಂದ ಸಂಗ್ರಹಿಸಿರುವ ಫಲಾನುಭವಿಗಳ ದತ್ತಾಂಶವನ್ನು ಆಧರಿಸಿ ‘ಗ್ಯಾರಂಟಿ’ ಪ್ರಚಾರ ಕಾರ್ಯತಂತ್ರ ಸಿದ್ಧಪಡಿಸಲಾಗುತ್ತಿದೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. ಈಗ ಅದೇ ಗ್ಯಾರಂಟಿಗಳ ಬಲವನ್ನು ನೆಚ್ಚಿಕೊಂಡು ಲೋಕಸಭಾ ಚುನಾವಣೆಯಲ್ಲಿ ಗುರಿ ತಲುಪುವ ಯೋಚನೆ ಕಾಂಗ್ರೆಸ್‌ ನಾಯಕರಲ್ಲಿದೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಯುವಜನರು. ಈ ಎರಡೂ ವರ್ಗಗಳ ಮತದಾರರನ್ನು ಗ್ಯಾರಂಟಿಗಳ ಮೂಲಕವೇ ‘ಹಸ್ತ’ದತ್ತ ಸೆಳೆಯಲು ‘ಗ್ಯಾರಂಟಿ’ ಅಸ್ತ್ರವನ್ನು ಚುನಾವಣಾ ಪ್ರಚಾರದುದ್ದಕ್ಕೂ ಪದೇ ಪದೇ ಪ್ರಸ್ತಾಪಿಸಲು ತೀರ್ಮಾನಿಸಿದೆ.

ಗ್ಯಾರಂಟಿ ಯೋಜನೆಗಳ ಕುರಿತು ಲೋಕಸಭಾ ಚುನಾವಣೆ ಅಧಿಸೂಚನೆ ಹೊರಬೀಳುವ ಮುನ್ನ ಅಂಗನವಾಡಿ ಕಾರ್ಯಕರ್ತರ ಮೂಲಕ ರಾಜ್ಯದಾದ್ಯಂತ ಸಮೀಕ್ಷೆ ನಡೆಸಲಾಗಿತ್ತು. 1.14 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಸಮೀಕ್ಷೆಯ ವರದಿ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಸಲ್ಲಿಕೆಯಾಗಿದೆ. ಈ ವರದಿಯನ್ನೂ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ನೇತೃತ್ವದಲ್ಲೇ ಈವರೆಗೆ ಗ್ಯಾರಂಟಿ ಯೋಜನೆ ಫಲಾನುಭವಿಗಳ 565 ಸಮಾವೇಶಗಳನ್ನು ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ 25, ತಾಲ್ಲೂಕು ಮಟ್ಟದಲ್ಲಿ 140 ಮತ್ತು ಹೋಬಳಿ ಮಟ್ಟದಲ್ಲಿ 400 ಸಮಾವೇಶಗಳನ್ನು ನಡೆಸಲಾಗಿದೆ.

‘ವಿಧಾನಸಭೆ ಚುನಾವಣೆಗೆ ಮುನ್ನ ಭರವಸೆ ನೀಡಿ ಈಗ ಜಾರಿಯಾಗಿರುವ ನಮ್ಮ ಗ್ಯಾರಂಟಿಗಳು ಜನರನ್ನು ತಲುಪಿವೆ. ಮೋದಿಯವರ ಗ್ಯಾರಂಟಿಗಳು ಇನ್ನೂ ಟಿ.ವಿಯಲ್ಲೇ ಇವೆ
ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT