ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಸುಳ್ಳುಗಳಿಗೆ ಸತ್ಯದ ದಾಖಲೆ ಮಂಡಿಸಿ: ಸಿದ್ದರಾಮಯ್ಯ

Published 23 ಮಾರ್ಚ್ 2024, 23:30 IST
Last Updated 23 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸರ್ವರನ್ನೂ ಸಮಾನವಾಗಿ ಕಾಣುವ ನಮ್ಮ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ‌ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸಿ’ ಎಂದು ಕರೆ ನೀಡಿದರು.

‘ಬಿಜೆಪಿಯವರಂತೆ ನಾವು ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ’ ಎಂದು ಜನರಿಗೆ ಮನವರಿಕೆ ಮಾಡುವಂತೆ ಸಲಹೆ ನೀಡಿದರು.

‘ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಶ್ವಾಸನೆಗಳು ಸರಣಿ ಸುಳ್ಳುಗಳು’ ಎಂದ ಮುಖ್ಯಮಂತ್ರಿ, ‘ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ಸಾಧನೆಗಳನ್ನು ತಮ್ಮ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯವರು ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಬೇಕು’ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ‘ನಾವು ನುಡಿದಂತೆ ನಡೆದು ನಿಮಗೆ ಶಕ್ತಿ ನೀಡಿದ್ದೇವೆ. ಈಗ ನೀವು ಪಂಚಾಯಿತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ಮನೆ ಮನೆಗೆ ಹೋಗಿ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು. ಆ ಮೂಲಕ ನಮಗೆ ನೀವು ಶಕ್ತಿ ನೀಡಬೇಕು’ ಎಂದರು.

‘ನೀವು ನಿಮ್ಮ ಬೂತ್‌ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲಿಲ್ಲವಾದರೆ ನೀವು ನಾಯಕರಲ್ಲ, ನೀವು ಕೆಲಸ ಮಾಡಿಲ್ಲ ಎಂದರ್ಥ. ಹೀಗಾಗಿ, ನೀವು ನಿಮ್ಮ ಬೂತ್‌ಗಳಲ್ಲಿ ಪಕ್ಷಕ್ಕೆ ಮುನ್ನಡೆ ತಂದು, ಪಕ್ಷವನ್ನು ಬಲಪಡಿಸಬೇಕು’ ಎಂದರು.

ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ. ಕೃಷ್ಣಪ್ಪ ಇದ್ದರು.‌

'ಗೆಲುವಿಗೆ ಶ್ರಮಿಸದಿದ್ದರೆ ಅಧಿಕಾರಕ್ಕೆ ಕುತ್ತು’

‘ಯಾರೂ ಹೊಂದಾಣಿಕೆ ರಾಜಕಾರಣ ಮಾಡಬಾರದು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸದೇ ಇದ್ದರೆ ಅಧಿಕಾರ ಸ್ಥಾನದಿಂದ ಕೆಳಗಿಳಿಸಲಾಗುವುದು’ ಎಂಬ ಸ್ಪಷ್ಟ ಸಂದೇಶವನ್ನು ಸಚಿವರು ನಿಗಮ ಮಂಡಳಿ ಅಧ್ಯಕ್ಷರು ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ಪರಿಷತ್ ಸದಸ್ಯರು ಮಾಜಿ ಶಾಸಕರು ಜಿಲ್ಲಾ ಘಟಕಗಳ ಅಧ್ಯಕ್ಷರು ನಿಗಮ ಮಂಡಳಿ ಅಧ್ಯಕ್ಷರ ಜೊತೆ ಅವರು ಶನಿವಾರ ಸಭೆ ನಡೆಸಿದರು.

‘ಪಕ್ಷದಿಂದಾಗಿ ನಾವು ಅಧಿಕಾರ ಅನುಭವಿಸುತ್ತಿದ್ದೇವೆ. ನಾನೂ ಸೇರಿದಂತೆ ಉಪ ಮುಖ್ಯಮಂತ್ರಿ ಸಚಿವರು ಎಲ್ಲರೂ ಪಕ್ಷದ ಕಾರ್ಯಕರ್ತರೇ. ಅಧಿಕಾರ ಅನುಭವಿಸುತ್ತಿರುವವರಿಗೆ ಕಾರು ಸೇರಿದಂತೆ ಎಲ್ಲ ಸೌಲಭ್ಯ ಸಿಕ್ಕಿದೆ.  ಜವಾಬ್ದಾರಿಯನ್ನೂ ನೀಡಲಾಗಿದೆ. ಪಕ್ಷದ ಅಭ್ಯರ್ಥಿಗಳನ್ನು  ಗೆಲ್ಲಿಸಿಕೊಳ್ಳಲು ಸಾಧ್ಯವಾಗದೇ ಇದ್ದರೆ ಅಧಿಕಾರ ಯಾಕೆ ಕೊಡಬೇಕು? ಕೊಟ್ಟ ಅಧಿಕಾರ ಉಳಿಯಬೇಕೆಂದರೆ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT