ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಡಿ.ವಿ.ಸದಾನಂದ ಗೌಡ ತೀರ್ಮಾನ ಇಂದು

Published 19 ಮಾರ್ಚ್ 2024, 19:48 IST
Last Updated 19 ಮಾರ್ಚ್ 2024, 19:48 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿರುವುದರಿಂದ ಮುನಿಸಿಕೊಂಡಿರುವ ಸಂಸದ ಡಿ.ವಿ.ಸದಾನಂದಗೌಡ ಅವರು ಮಂಗಳವಾರ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ, ಬುಧವಾರ ತಮ್ಮ ತೀರ್ಮಾನ
ಪ್ರಕಟಿಸುವುದಾಗಿ ಹೇಳಿದರು.

ಈ ಮಧ್ಯೆ ಬಿಜೆಪಿ ವರಿಷ್ಠರು ಸದಾನಂದಗೌಡರ ಜತೆ ಮಾತನಾಡಿ, ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಅದರ ಭಾಗವಾಗಿ ಚಿಕ್ಕಬಳ್ಳಾಪುರ ಟಿಕೆಟ್‌ ನೀಡುವ ಪ್ರಸ್ತಾವವನ್ನೂ ಅವರ ಮುಂದಿಟ್ಟಿದ್ದಾರೆ ಎಂಬ ವದಂತಿಯೂ ದಟ್ಟವಾಗಿ ಹರಡಿದೆ.

ಒಕ್ಕಲಿಗರ ಸಂಘದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಗೌಡರು,  ‘ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಲಿಂಗಾಯತ ಸಮುದಾಯಕ್ಕೆ ಎಂಟು ಟಿಕೆಟ್‌ ನೀಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್‌ ನೀಡಲಾಗಿದೆ.  ನಮ್ಮ ಸಮುದಾಯಕ್ಕೂ ಎಂಟು ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಬೇಕು. ಸಿ.ಟಿ.ರವಿ, ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೊಟ್ಟಿಲ್ಲ. ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡೋಣ’ ಎಂದು ಹೇಳಿದ್ದಾಗಿ, ಮೂಲಗಳು ತಿಳಿಸಿವೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಸದಾನಂದಗೌಡ, ‘ಸಂಘದ ಅಧ್ಯಕ್ಷ ಮತ್ತು ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಈ ಎಲ್ಲ ವಿಚಾರಗಳನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತೇನೆ’ ಎಂದರು. 

ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ‘ಸದಾನಂದಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಂಪೂರ್ಣ ಬೆಂಬಲವಿದೆ’ ಎಂದರು.

ತಮ್ಮ ಕುಟುಂಬದ ಸದಸ್ಯರ ಜತೆ ಚರ್ಚೆ ನಡೆಸಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮುಂದಿನ ರಾಜಕೀಯ ನಡೆಯನ್ನು ಪ್ರಕಟಿಸುವುದಾಗಿ ಗೌಡರು ಸೋಮವಾರ ಹೇಳಿದ್ದರು. ಆದರೆ, ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಲು ಹಿಂದೇಟು ಹಾಕಿದರು.

‘ಈ ಹಿಂದೆ ಕರೆತಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಈಗಾಗಲೇ ವಾಪಸ್ ಹೋಗಿದ್ದಾರೆ. ಈಗ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಕರೆತಂದರೂ ಅದೇ ರೀತಿ ಆಗಬಹುದು. ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಯಾರನ್ನೂ ಸೇರಿಸಿ ಕೊಳ್ಳುವುದು ಬೇಡ’ ಎಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT