ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Results | ರಾಷ್ಟ್ರ ರಾಜಕಾರಣಕ್ಕೆ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ

Published 6 ಜೂನ್ 2024, 4:24 IST
Last Updated 6 ಜೂನ್ 2024, 4:24 IST
ಅಕ್ಷರ ಗಾತ್ರ

ಬೆಳಗಾವಿ/ಹಾವೇರಿ: ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ರಾಷ್ಟ್ರ ರಾಜಕಾರಣಕ್ಕೆ ಕಾಲಿರಿಸಿದ್ದಾರೆ.

ಸತತ ಆರು ಸಲ ವಿಧಾನಸಭೆಗೆ ಆಯ್ಕೆಯಾದ ಜಗದೀಶ ಶೆಟ್ಟರ್‌ ಅವರು ಮುಖ್ಯಮಂತ್ರಿ ಅಲ್ಲದೇ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಎರಡು ವರ್ಷಗಳಿಂದ ರಾಜಕೀಯ ಏಳು– ಬೀಳು ಅನುಭವಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಅವರು ‘ಹೊರಗಿನ ಅಭ್ಯರ್ಥಿ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಯಿತು. ಅದಕ್ಕೆ ಪ್ರತಿಯಾಗಿ ಅವರು, ‘ಹುಬ್ಬಳ್ಳಿ ನನ್ನ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ’ ಎಂದು ತಿರುಗೇಟು ನೀಡಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಶೆಟ್ಟರ್‌ ಬಿಜೆಪಿ ತೊರೆದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲುಂಡ ಅವರನ್ನು, ವಿಧಾನ ಪರಿಷತ್‌ಗೆ ನೇಮಕ ಮಾಡಲಾಗಿತ್ತು. ಬದಲಾದ ಸನ್ನಿವೇಶದಲ್ಲಿ ಅವರು ಬಿಜೆಪಿ ಸೇರಿ, ಚುನಾವಣೆಗೆ ಸ್ಪರ್ಧಿಸಿದರು.

ಎರಡು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ, ಶಿಗ್ಗಾವಿ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರೂ ಮುಖ್ಯಮಂತ್ರಿ ಮತ್ತು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾವಿಯಿಂದ ಗೆದ್ದು ಶಾಸಕರಾಗಿದ್ದ ಸಂದರ್ಭದಲ್ಲೇ ಬಿಜೆಪಿ ಹೈಕಮಾಂಡ್‌ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಸೂಚಿಸಿತು. ಅದರಂತೆ, ಸ್ಪರ್ಧಿಸಿದ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯ ಗೆದ್ದು ಹೈಕಮಾಂಡ್‌ನ ವಿಶ್ವಾಸ ಉಳಿಸಿಕೊಂಡಿದ್ದಾರೆ.

ಬೊಮ್ಮಾಯಿ ಅವರ ತಂದೆ ಎಸ್‌.ಆರ್‌.ಬೊಮ್ಮಾಯಿ 1988ರಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ನಂತರ, ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದ ಅವರು 1992 ಮತ್ತು 1998ರಲ್ಲಿ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1996ರಿಂದ 1998ರವರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT