ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ಪಲಾಯನಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ: ಸುಪ್ರಿಯಾ ಶ್ರೀನೇತ್‌

Published 30 ಏಪ್ರಿಲ್ 2024, 10:57 IST
Last Updated 30 ಏಪ್ರಿಲ್ 2024, 10:57 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಭಾರತದಿಂದ ಪಲಾಯನ ಮಾಡಲು ಅನುಕೂಲ ಮಾಡಿಕೊಟ್ಟಿದೆ’ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಆರೋಪಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಮಾಹಿತಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮೊದಲೇ ಗೊತ್ತಿತ್ತು. 2023ರ ಡಿಸೆಂಬರ್‌ನಲ್ಲೇ ಈ ವಿಷಯ ಗಮನಕ್ಕೆ ತಂದ ಸ್ಥಳೀಯ ಬಿಜೆಪಿ ನಾಯಕರು, ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದಂತೆ ಎಚ್ಚರಿಕೆ ಕೊಟ್ಟಿದ್ದರು. ಆದರೂ, ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಲು ಪ್ರಜ್ವಲ್‌ಗೆ ಟಿಕೆಟ್ ನೀಡಲಾಯಿತು’ ಎಂದು ದೂರಿದರು.

‘ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮೋದಿ ಅವರು, ಪ್ರಜ್ವಲ್ ಪರ ಮತಯಾಚಿಸಿ ಬೆನ್ನು ತಟ್ಟಿದ್ದರು. ಆದರೆ, ಬಿಜೆಪಿಯು ತನ್ನ ಮೈತ್ರಿ ಪಾಲುದಾರನ ರಾಕ್ಷಸ ಕೃತ್ಯಗಳಿಂದ ಅಂತರ ಕಾಯ್ದುಕೊಳ್ಳಲು ಮತ್ತು ಮೌನವಾಗಿರಲು ಸಾಧ್ಯವಿಲ್ಲ’ ಎಂದರು.

‘ಬಿಜೆಪಿ ಹೊರತಾದ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆ ನಡೆದಾಗ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಧ್ವನಿ ಎತ್ತಿದ್ದರು. ಆದರೆ, ಕರ್ನಾಟಕದಲ್ಲಿ ಮೌನ ವಹಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಮಾತನಾಡುತ್ತಿಲ್ಲ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿಯವರು ಅತ್ಯಾಚಾರಿಗಳ ನೆರವಿಗೆ ಬರುವುದು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಾರಣರಾಗುವುದು ಇದೇ ಹೊಸದೇನಲ್ಲ. ಅವರು ಈ ಹಿಂದೆಯೂ ಅತ್ಯಾಚಾರಿಗಳನ್ನು ಬೆಂಬಲಿಸಿದ್ದಾರೆ’ ಎಂದು ದೂರಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ‘ಬಿಜೆಪಿ ಮತ್ತು ಮೋದಿ ಅವರಿಗೂ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣಕ್ಕೂ ಸಂಬಂಧವಿಲ್ಲ ವೆಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಹೇಳುವಂತಿಲ್ಲ. ಲೈಂಗಿಕ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಲಿದೆ’ ಎಂದರು.

ಕೆಪಿಸಿಸಿ‌ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ, ಶಾಸಕರಾದ ಆಸೀಫ್ ಸೇಠ್, ನಯನಾ ಮೋಟಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT