ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಕ್ಷೇತ್ರ | ಒಂದೇ ದಿನ 87 ಮಂದಿ ನಾಮಪತ್ರ ಸಲ್ಲಿಕೆ!

14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಕೊನೆ
Published 3 ಏಪ್ರಿಲ್ 2024, 22:30 IST
Last Updated 3 ಏಪ್ರಿಲ್ 2024, 22:30 IST
ಅಕ್ಷರ ಗಾತ್ರ

ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಒಂದು ದಿನವಷ್ಟೇ ಬಾಕಿ ಇದೆ. ಬುಧವಾರ ಒಂದೇ ದಿನ 87 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈವರೆಗೆ ಒಟ್ಟು 199 ಮಂದಿ ಲೋಕಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಏಪ್ರಿಲ್‌ 26ರಂದು ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಮಾರ್ಚ್‌ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. 184 ಪುರುಷರು ಮತ್ತು 15 ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಹಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದ್ದು, ಒಟ್ಟು 268 ನಾಮಪತ್ರಗಳು ಬಂದಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ ಮೀನಾ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅತ್ಯಧಿಕ 23 ಮಂದಿ ನಾಮಪತ್ರಗಳು ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 20, ಮಂಡ್ಯದಲ್ಲಿ 18, ಮಂಡ್ಯ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣದಲ್ಲಿ ತಲಾ 18, ಚಾಮರಾಜನಗರದಲ್ಲಿ 16, ಮೈಸೂರಿನಲ್ಲಿ 15, ಬೆಂಗಳೂರು ಉತ್ತರದಲ್ಲಿ 13, ಹಾಸನ ಮತ್ತು ತುಮಕೂರಿನಲ್ಲಿ ತಲಾ 12, ಚಿತ್ರದುರ್ಗದಲ್ಲಿ 11, ಉಡುಪಿ– ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ ಎಂಟು ಹಾಗೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಏಳು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕೊನೆಯ ದಿನದತ್ತ ಚಿತ್ತ: ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಇನ್ನೂ ನಾಮಪತ್ರ ಸಲ್ಲಿಸಿಲ್ಲ. ಈ ಕ್ಷೇತ್ರಗಳ ಅಭ್ಯರ್ಥಿಗಳಾದ ಡಾ.ಸಿ.ಎನ್‌. ಮಂಜುನಾಥ್‌ ಮತ್ತು ತೇಜಸ್ವಿ ಸೂರ್ಯ ಗುರುವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಾಕಿ ಇದೆ. ಈ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳಾಗಿರುವ ಬಿ.ಎನ್‌. ಚಂದ್ರಪ್ಪ, ಎಸ್‌.ಪಿ. ಮುದ್ದಹನುಮೇಗೌಡ ಮತ್ತು ಕೆ.ವಿ. ಗೌತಮ್‌ ಕೂಡ ಕೊನೆಯ ದಿನವೇ ಕಣಕ್ಕಿಳಿಯಲಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಹಂಚಿಕೆಯಾಗಿರುವ ಮೂರು ಕ್ಷೇತ್ರಗಳ ಪೈಕಿ ಹಾಸನ ಮತ್ತು ಕೋಲಾರದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT