ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

Last Updated 12 ಏಪ್ರಿಲ್ 2023, 13:57 IST
ಅಕ್ಷರ ಗಾತ್ರ

ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್‌, ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಪಕ್ಷೇತರ ಅಥವಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.

ವಾಣಿವಿಲಾಸ ಜಲಾಶಯದ ಹಿನ್ನೀರಿನ ಹಾರನ ಕಣಿವೆ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಬುಧವಾದ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಜಾಥಾ ನಡೆಸಿ ಚುನಾವಣಾ ಪ್ರಚಾರವನ್ನು ಆರಂಭಿಸಿದರು.

‘ಟಿಕೆಟ್‌ ಕೈತಪ್ಪುವ ಸಾಧ್ಯತೆ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು. ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮನವೊಲಿಸುವ ಪ್ರಯತ್ನ ಮಾಡಿದ್ದೆ. ಟಿಕೆಟ್ ಕೈತಪ್ಪಿರುವುದರಿಂದ ಸಹಜವಾಗಿ ನೋವಾಗಿದೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಇದಕ್ಕೆ ನೇರ ಕಾರಣ’ ಎಂದು ಸುದ್ದಿಗಾರರ ಬಳಿ ಅಸಮಾಧಾನ ಹೊರಹಾಕಿದರು.

‘ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂಬ ಸಂದೇಶವನ್ನು ಕ್ಷೇತ್ರದ ಮತದಾರರಿಗೆ ರವಾನಿಸಿದ್ದೇನೆ. ಪಕ್ಷೇತರರಾಗಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜನಾರ್ದನ ರೆಡ್ಡಿ ಅವರೂ ಮಂಗಳವಾರ ರಾತ್ರಿ ಸಂಪರ್ಕಿಸಿ ಚರ್ಚೆ ನಡೆಸಿದ್ದಾರೆ. ಹಿತೈಷಿಗಳ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ’ ಎಂದು ಮಾಹಿತಿ ನೀಡಿದರು.

‘ಪರಿಶಿಷ್ಟ ಜಾತಿಗೆ ಸೇರಿದ ನಾನು ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದ ಬಿಜೆಪಿಗೆ ಕೃತಜ್ಞನಾಗಿದ್ದೇನೆ. ಸಾಮಾನ್ಯ ಕ್ಷೇತ್ರದಲ್ಲಿ ಪ್ರತಿ ಬಾರಿ ನನಗೆ ಅವಕಾಶ ಕಲ್ಪಿಸಿ ಎಂಬುದಾಗಿ ಒತ್ತಡ ಹೇರುವುದು ತಪ್ಪಾಗುತ್ತದೆ. ಬಿಜೆಪಿ ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವೀಕರಿಸಿದ್ದೇನೆ. ನೀರಾವರಿ ಯೋಜನೆಗಳ ಟೆಂಡರ್‌ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೀಡಿದ ಪ್ರತಿಕ್ರಿಯೆಯಿಂದ ಟಿಕೆಟ್‌ ಕೈತಪ್ಪಿದೆ ಎಂಬುದನ್ನು ಒಪ್ಪುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT