ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಸೊಗಡು ಶಿವಣ್ಣ -ಮುದ್ದಹನುಮೇಗೌಡ ಬಂಡಾಯ, ಸ್ಪರ್ಧೆಗೆ ಸಿದ್ಧತೆ

Last Updated 12 ಏಪ್ರಿಲ್ 2023, 15:35 IST
ಅಕ್ಷರ ಗಾತ್ರ

ತುಮಕೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿ ಹೊರ ಬೀಳುತ್ತಿದ್ದಂತೆ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಬಂಡಾಯ ಬಿರುಸುಗೊಂಡಿದ್ದು, ಮಾಜಿ ಶಾಸಕ ಸೊಗಡು ಶಿವಣ್ಣ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಪಕ್ಷ ತೊರೆಯಲು ಮುಂದಾಗಿದ್ದಾರೆ.

ತುಮಕೂರು ನಗರ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಬಂಡೆದ್ದಿರುವ ಸೊಗಡು ಶಿವಣ್ಣ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಂದೆರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. 2013ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. 2018ರಲ್ಲಿ ವರಿಷ್ಠರ ಮಾತಿಗೆ ಕಟ್ಟು ಬಿದ್ದು ಸ್ಪರ್ಧೆಯಿಂದ ಹಿಂದೆ ಸರಿದು, ಜಿ.ಬಿ.ಜ್ಯೋತಿಗಣೇಶ್ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

‘ಸತತ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಈ ಬಾರಿ ಟಿಕೆಟ್‌ ನೀಡಲೇಬೇಕು’ ಎಂದು ಪಟ್ಟು ಹಿಡಿದಿದ್ದರು. ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿದ್ದು, ಪಕ್ಷ ತೊರೆಯಲು ಸಜ್ಜಾಗಿದ್ದಾರೆ.

ಕುಣಿಗಲ್ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ಭರವಸೆಯೊಂದಿಗೆ ಸಿದ್ಧತೆ ನಡೆಸಿದ್ದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಕುಣಿಗಲ್ ಕ್ಷೇತ್ರದಿಂದ ಸ್ಪರ್ಧೆಗೆ ಟಿಕೆಟ್ ಖಚಿತಪಡಿಸಿಕೊಂಡೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕುಣಿಗಲ್ ಕ್ಷೇತ್ರವಷ್ಟೇ ಅಲ್ಲದೆ ಪಕ್ಕದ ತುಮಕೂರು ಗ್ರಾಮಾಂತರ, ತುರುವೇಕೆರೆ ಕ್ಷೇತ್ರಗಳಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಿದ್ದರು. ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿದೆ. ಕುಣಿಗಲ್ ಕ್ಷೇತ್ರದಿಂದ ಸತತ ಮೂರು ಬಾರಿ ಸ್ಪರ್ಧಿಸಿ ಸೋತಿರುವ ಡಿ.ಕೃಷ್ಣಕುಮಾರ್ ಅವರಿಗೆ ನಾಲ್ಕನೇ ಬಾರಿಗೆ ಟಿಕೆಟ್ ನೀಡಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT