ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳಿಗೆ ಬಿಸಿತುಪ್ಪವಾದ ಬಂಡಾಯ

Published 3 ಏಪ್ರಿಲ್ 2024, 19:58 IST
Last Updated 3 ಏಪ್ರಿಲ್ 2024, 19:58 IST
ಅಕ್ಷರ ಗಾತ್ರ

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಬಂಡಾಯ ಬಿಸಿತುಪ್ಪವಾಗಿದೆ. ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಆಕಾಂಕ್ಷಿಗಳು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬೀದಿ ರಂಪ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಂಡಾಯ ಶಮನವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ.

ಕಾಂಗ್ರೆಸ್‌ನಿಂದ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಅವರನ್ನು ಕಣಕ್ಕೆ ಇಳಿಸಲಾಗಿದೆ. ಬಿಜೆಪಿಯು ಹಾಲಿ ಸಂಸದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಬದಲಿಗೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಿದೆ. ‘ಹೊರಗಿನವರು’ ಬೇಡ ಎಂದರೂ ಎರಡೂ ಪಕ್ಷಗಳು ಹೊರಗಿನವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿಗೆ ವೇದಿಕೆ ಸಜ್ಜಾಗಿದೆ.

ಚಿತ್ರದುರ್ಗ ಜಿಲ್ಲೆಯ ಆರು ಹಾಗೂ ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಕ್ಷೇತ್ರವನ್ನು ಇದುವರೆಗೂ ‘ಹೊರಗಿನವರೇ’ ಪ್ರತಿನಿಧಿಸಿದ್ದು ಹೆಚ್ಚು ಎಂಬ ಅಸಮಾಧಾನ ಮತದಾರರಲ್ಲಿದೆ. ‘ಸ್ಥಳೀಯ ಅಭ್ಯರ್ಥಿ’ ಹೆಸರಿನಲ್ಲಿ ಅಖಾಡಕ್ಕೆ ಇಳಿಯಲು ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ಎಂ.ಸಿ.ರಘುಚಂದನ್‌ ಸಜ್ಜಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಮಧ್ಯಪ್ರವೇಶದಿಂದ ಕಮಲ ಪಾಳೆಯದ ಬಂಡಾಯ ಶಮನವಾಗಿದೆ.

‘ಭೋವಿ ಸಮುದಾಯಕ್ಕೆ ಅವಕಾಶ ನೀಡಿಲ್ಲ’ ಎಂಬ ಅಸಮಾಧಾನ ಕಾಂಗ್ರೆಸ್‌ ವಿರುದ್ಧ ಶುರುವಾಗಿದೆ. ಮಾಜಿ ಸಚಿವ ವೆಂಕಟರಮಣಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಅಭ್ಯರ್ಥಿ ಬದಲಾವಣೆಗೆ ಪಟ್ಟುಹಿಡಿದಿದ್ದಾರೆ. ಬಂಡಾಯ ಶಮನ ಮಾಡುವ ಸವಾಲು ಕಾಂಗ್ರೆಸ್‌ ಮುಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT