ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಿತಿಯಿಂದ ಮತ ಚಲಾಯಿಸಿ: ಶುಭಾ ಕಲ್ಯಾಣ್

ಕೊರಟಗೆರೆಯ ಕಾಶಾಪುರದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ
Last Updated 7 ಏಪ್ರಿಲ್ 2019, 15:30 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾವುದೇ ಆಮಿಷಕ್ಕೊಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಕರೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಕೊರಟಗೆರೆ ತಾಲ್ಲೂಕು ಕಾಶಾಪುರ ಗ್ರಾಮದ ಹಕ್ಕಿ-ಪಿಕ್ಕಿ ಜನಾಂಗದವರ ಕಾಲೊನಿಯಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತಪಟ್ಟಿಯಲ್ಲಿ ತಮ್ಮ ಹೆಸರಿದ್ದು, ಎಪಿಕ್ ಕಾರ್ಡ್ ಹೊಂದಿಲ್ಲದಿದ್ದರೂ 11 ಪರ್ಯಾಯ ದಾಖಲಾತಿಗಳಲ್ಲಿ ಯಾವುದಾದರು ಒಂದನ್ನು ಮತಗಟ್ಟೆಯಲ್ಲಿ ಹಾಜರುಪಡಿಸಿದರೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಚುನಾವಣೆ ದಿನದಂದು ವೃದ್ಧರು ಹಾಗೂ ಅಂಗವಿಕಲರು ಮತದಾನ ಮಾಡಲು ಅನುವಾಗುವಂತೆ ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಉಚಿತ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಪ್ರತಿ ಮತಗಟ್ಟೆಯಲ್ಲಿಯೂ ಸ್ವಯಂ-ಸೇವಕರನ್ನು ನೇಮಕ ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಮಾಂಕಾಳಪ್ಪ ಮಾತನಾಡಿ, ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಸಿ-ವಿಜಿಲ್ ಆಪ್ ಹಾಗೂ ಚುನಾವಣಾ ಮಾಹಿತಿ ಪಡೆಯಲು ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 1950ರ ಬಳಕೆ ಬಗ್ಗೆ ವಿವರಣೆ ನೀಡಿದರು.

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳ ಬಳಕೆ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಕಾಶಾಪುರ ಆಶ್ರಮ ಶಾಲೆಯಲ್ಲಿ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಮತದಾನ ಜಾಗೃತಿ ಕುರಿತು ಕೊರಟಗೆರೆ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಂಗವಿಕಲರಿಂದ ಯಂತ್ರಚಾಲಿತ ತ್ರಿಚಕ್ರ ವಾಹನಗಳ ಮೂಲಕ ಜಾಥಾ ಹಾಗೂ ನವೀನ್ ಮತ್ತು ತಂಡದವರಿಂದ ಬೀದಿನಾಟಕ ಏರ್ಪಡಿಸಲಾಗಿತ್ತು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಆರ್.ರಾಜಕುಮಾರ್, ಸ್ವೀಪ್ ಸಮಿತಿ ಸದಸ್ಯ ರಾಜಶೇಖರ್, ಕೊರಟಗೆರೆ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಸರ್ವೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗಪ್ಪ, ವಯಸ್ಕರ ಶಿಕ್ಷಣಾಧಿಕಾರಿ ಬಾಲಾಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT