ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸೂಕ್ಷ್ಮ ವಲಯದಲ್ಲಿ ಮನೆ: ನೋಟಿಸ್‌ಗೆ ಉತ್ತರಿಸಿ– ನಟ ಗಣೇಶ್‌ಗೆ ಹೈಕೋರ್ಟ್‌

Published 21 ಆಗಸ್ಟ್ 2023, 14:32 IST
Last Updated 21 ಆಗಸ್ಟ್ 2023, 14:32 IST
ಅಕ್ಷರ ಗಾತ್ರ

ಬೆಂಗಳೂರು: ‘ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ವಾಸದ ಮನೆ ನಿರ್ಮಿಸುತ್ತಿರುವ ಚಿತ್ರನಟ ಗಣೇಶ್, ಈ ಸಂಬಂಧ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗೆ ಒಂದು ವಾರದ ಒಳಗೆ ಉತ್ತರಿಸಬೇಕು ಮತ್ತು ಸಂಬಂಧಿಸಿದ ಇಲಾಖೆಗಳು ಈ ಉತ್ತರಕ್ಕೆ ಅನುಗುಣವಾಗಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು‘ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಗಣೇಶ್‌ ಕಿಶನ್‌ ಬಿನ್‌ ಕಿಶನ್‌ ಅಲಿಯಾಸ್ ನಟ ಗಣೇಶ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕಡತವನ್ನು ಪರಿಶೀಲಿಸಿದ ನ್ಯಾಯಪೀಠ, ‘ಗಣೇಶ್‌ ಅವರಿಂದ ಒಂದು ವಾರದೊಳಗೆ ಉತ್ತರ ಪಡೆದು, ನಾಲ್ಕು ವಾರಗಳಲ್ಲಿ ಮುಂದಿನ ಕ್ರಮ ಕೈಗೊಳ್ಳಿ‘ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿ ಅರ್ಜಿ ವಿಲೇವಾರಿ ಮಾಡಿತು.

ಪ್ರಕರಣವೇನು?: ‘ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಜಕ್ಕಳಿ ಗ್ರಾಮದ ಸರ್ವೇ ನಂಬರ್‌ 105ರಲ್ಲಿ ಗಣೇಶ್ 1 ಎಕರೆ 24 ಗುಂಟೆ ಜಮೀನು ಖರೀದಿಸಿದ್ದಾರೆ. ಈ ಸ್ವತ್ತಿನಲ್ಲಿ ಅವರು ಜೆಸಿಬಿ ಯಂತ್ರದ ಸಹಾಯದಿಂದ ಭೂಮಿಯನ್ನು ಸಮತಟ್ಟು ಮಾಡಿ, ಬೃಹತ್ ಕಟ್ಟಡ ನಿರ್ಮಾಣಕ್ಕೆ ತಯಾರಿ ನಡೆಸುತ್ತಿರುವುದು ಕಂಡು ಬಂದಿದೆ‘ ಎಂದು ಆಕ್ಷೇಪಿಸಿದ್ದ ಅಧಿಕಾರಿಗಳು, ‘ಷರತ್ತುಗಳನ್ನು ಉಲ್ಲಂಘಿಸಿ ಬೃಹತ್‌ ಶಾಶ್ವತ ಕಟ್ಟಡ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿರುವುದರಿಂದ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು‘ ಎಂದು ಸೂಚಿಸಿದ್ದರು. 

ಈ ಸಂಬಂಧ ಬಂಡೀಪುರ ಸೂಕ್ಷ್ಮ ಪರಿಸರ ವಲಯದ ಉಸ್ತುವಾರಿ ಸಮಿತಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಂಡೀಪುರ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕರು ಇದೇ 14ರಂದು ಗಣೇಶ್‌ಗೆ ನೋಟಿಸ್‌ ನೀಡಿದ್ದರು. ಈ ನೋಟಿಸ್‌ ಅನ್ನು ಪ್ರಶ್ನಿಸಿ ಗಣೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT