ಭಾನುವಾರ, ಜೂನ್ 26, 2022
27 °C

ಕಂಬಳ ವೀರರ ಕಥೆಯೇ ಹೀರೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕರಾವಳಿಯ ಜನಪದ ಕ್ರೀಡೆ ಕಂಬಳದ ಕುರಿತ ಚಿತ್ರ ಕನ್ನಡ, ತುಳು ಭಾಷೆಗಳಲ್ಲಿ ಮೂಡಿಬರಲಿದೆ. ‘ವೀರ ಕಂಬಳ’ ಈ ಚಿತ್ರದ ಹೆಸರು. ಎಸ್‌.ವಿ.ರಾಜೇಂದ್ರಸಿಂಗ್‌ ಬಾಬು ಈ ಚಿತ್ರದ ನಿರ್ದೇಶಕರು. ಅರುಣ್‌ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. 

‘ವೀರ ಕಂಬಳ’ ರಾಜೇಂದ್ರ ಸಿಂಗ್‌ ಬಾಬು ತಲೆಗೆ ಹೊಳೆದದ್ದು ಹೇಗೆ ಅನ್ನುವುದನ್ನು ಅವರದೇ ಮಾತಿನಲ್ಲಿ ಕೇಳಿ.

‘ನಾನು ವಾರಪತ್ರಿಕೆಯೊಂದರಲ್ಲಿ ಕಂಬಳದ ಕುರಿತ ಬರಹಗಳನ್ನು ಓದುತ್ತಿದ್ದೆ. ಆ ಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗೆಗಿನ ಲೇಖನಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧರಿಸಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್‌ ಅವರಿಂದಲೂ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ಧವಾಯಿತು. ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ನೋಡಿಕೊಂಡು ಚಿತ್ರೀಕರಿಸಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ. ಈ ಚಿತ್ರಕ್ಕೆ ಕಥೆಯೇ ಹೀರೋ’ ಎಂದರು.

‘ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಡಿ. ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ನಟರು ಈ ಚಿತ್ರದಲ್ಲಿದ್ದಾರೆ’ ಎಂದರು ರಾಜೇಂದ್ರ ಸಿಂಗ್‌ ಬಾಬು.

‘ಸ್ವಲ್ಪ ಭಾಗ ಚಿತ್ರೀಕರಣ ಮಾತ್ರ ಬಾಕಿಯಿದೆ. ಖ್ಯಾತ ನಟ ಪ್ರಕಾಶ್ ರಾಜ್ ಅಭಿನಯಿಸಲಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ‘ವೀರ ಕಂಬಳ’ ನಿಮ್ಮ ಮುಂದೆ ಬರಲಿದೆ. ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಷೋ ನಡೆಸುವ ಯೋಜನೆಯಿದೆ’ ಎಂದರು.

‘ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮೊದಲಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರ ಕೋರಿಕೆಯಂತೆ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ’ ಎಂದರು ನಟ ಆದಿತ್ಯ.

ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ಅವರು ಮೊದಲ ಬಾರಿ ಕನ್ನಡದಲ್ಲಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಆರ್. ಗಿರಿ ಛಾಯಾಗ್ರಹಣವಿದೆ. ಶ್ರೀನಿವಾಸ್ ಆರ್ ಬಾಬು ಸಂಕಲನವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು