ಭಾನುವಾರ, ನವೆಂಬರ್ 17, 2019
21 °C
‘ಸ್ವಚ್ಛಮೇವ ಜಯತೆ’ ಜಾಗೃತಿ ಜಾಥಾಗೆ ಚಾಲನೆ

ಸ್ವಚ್ಛತೆ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯನ್ನು ತ್ಯಾಜ್ಯಮುಕ್ತಗೊಳಿಸುವ, ಪರಿಸರ ಹಾಗೂ ಜಲ ಸಂರಕ್ಷಣೆ ವಿಚಾರದಲ್ಲಿ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಸ್ವಚ್ಛಮೇವ ಜಯತೆ’ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ ಅಕ್ಟೋಬರ್ 2 ರಿಂದ ಇಡೀ ದೇಶವನ್ನು ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಕರೆ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲೆಡೆ ನೈರ್ಮಲ್ಯ ಕಾಪಾಡುವ ಅಗತ್ಯ ಇದೆ. ಸ್ವಚ್ಛಮೇವ ಜಯತೇ ಜಾಗೃತಿ ಜಾಥಾದ ಭಾಗವಾಗಿ ಜಿಲ್ಲೆಯ 52 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಗುತ್ತದೆ’ ಎಂದು ಹೇಳಿದರು.

‘ಮೂಲದಲ್ಲಿಯೇ ಹಸಿ ಮತ್ತು ಒಣ ಕಸವನ್ನು ವಿಂಗಡಿಸಬೇಕು. ಇದರಿಂದ ವೈಜ್ಞಾನಿಕ ರೀತಿಯ ವಿಲೇವಾರಿಗೆ ಅನುಕೂಲವಾಗುತ್ತದೆ. ಎಲ್ಲೆಂದರಲ್ಲೇ ಕಸವನ್ನು ಎಸೆಯಬಾರದು. ಬೇಕಾಬಿಟ್ಟಿ ತಾಜ್ಯ ಎಸೆಯುವವರು, ಗಲೀಜು ಮಾಡುವವರಿಗೆ ಸ್ಥಳೀಯ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಂಡ ವಿಧಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಿದ್ದಾರ್ಥ ಕಲಾ ತಂಡದ ಕಲಾವಿದರು ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಹಾಡುಗಳನ್ನು ಹಾಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಮುಖ್ಯ ಯೋಜನಾಧಿಕಾರಿ ಮಾಧುರಾವ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರತಿಕ್ರಿಯಿಸಿ (+)