ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ ಜಾರಿಗೆ ಬಂದು ಎಂಟು ವರ್ಷಗಳಾಗಿವೆ. ಹೊಸ ತೆರಿಗೆ ಪದ್ಧತಿಯಿಂದಾಗಿ ತೆರಿಗೆ ಸಂಗ್ರಹದಲ್ಲಿ ಏರಿಕೆಯಾಗಿದೆ. ತೆರಿಗೆದಾರರ ಸಂಖ್ಯೆಯೂ ಹೆಚ್ಚಾಗಿದೆ. ಐದು ವರ್ಷಗಳಲ್ಲಿ ಜಿಎಸ್‌ಟಿ ಸಂಗ್ರಹ ದುಪ್ಪಟ್ಟಾಗಿದೆ. ಜಿಎಸ್‌ಟಿ ಅನುಷ್ಠಾನ ಯಶಸ್ವಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದ್ದರೆ, ಅನುಷ್ಠಾನ ಸಮರ್ಪಕವಾಗಿಲ್ಲ ಎಂದು ವಿರೋಧ ಪಕ್ಷಗಳು ದೂರುತ್ತಿವೆ. ಜಿಎಸ್‌ಟಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣಗೊಳಿಸಬೇಕು, ಪೆಟ್ರೋಲಿಯಂ ಉತ್ಪನ್ನಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎನ್ನುವ ಒತ್ತಾಯ ವಿವಿಧ ವಲಯಗಳಿಂದ ಕೇಳಿಬರುತ್ತಿದೆ. ಇದರ ನಡುವೆಯೇ ಜಿಎಸ್‌ಟಿ ವ್ಯವಸ್ಥೆಯಲ್ಲಿ ಮತ್ತೊಂದು ಸುತ್ತಿನ ಬದಲಾವಣೆ ತರಲು (ಜಿಎಸ್‌ಟಿ 2.0) ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ