ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡ ಸಿನಿಮಾ ನಟರು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವ ಮೂಲಕ ಉತ್ತೇಜಿಸಿದ ಯುಟ್ಯೂಬರ್‌ಗಳ ವಿರುದ್ಧ ತೆಲಂಗಾಣದಲ್ಲಿ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆನ್‌ಲೈನ್ ಗೇಮಿಂಗ್ ವಿಚಾರ ಮುನ್ನೆಲೆಗೆ ಬಂದಿದೆ. ಇವುಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೆಲವು ನಿಯಮಗಳನ್ನು ರೂಪಿಸಿದ್ದರೂ ಇದರ ಬಗ್ಗೆ ರಾಜ್ಯಗಳೇ ಕ್ರಮ ಕೈಗೊಳ್ಳಬೇಕು ಎಂದು ಹೇಳುತ್ತಿದೆ. ಕೆಲವು ರಾಜ್ಯಗಳಲ್ಲಿ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಕಾನೂನಿನಲ್ಲಿ ಸ್ಪಷ್ಟತೆಯ ಕೊರತೆ ಇದೆ. ಅತ್ಯಂತ ಬೇಗ ಹಣ ಮಾಡುವ ಆಸೆಯಿಂದ ಜನ ಅತ್ಯಂತ ಶೀಘ್ರವಾಗಿ ಹಣ ಕಳೆದುಕೊಳ್ಳುತ್ತಲೇ ಇದ್ದಾರೆ