ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ‘ರಕ್ಷಣಾ ಘಟಕ’ವಾಗಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ವಿಶೇಷ ಪೊಲೀಸ್ ಠಾಣೆ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೂ ಸೀಮಿತ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿಸಿಆರ್‌ಇಗೆ ಹೊಸ ಆದೇಶದಿಂದ ಹೆಚ್ಚಿನ ಬಲ ಬಂದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು, ಅನ್ಯಾಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಇದು ದಿಟ್ಟ ಹೆಜ್ಜೆ ಎಂದು ಹೇಳಲಾಗುತ್ತಿದೆ.
ಐತಿಹಾಸಿಕ ನಿರ್ಧಾರ
ರಾಜ್ಯ ಸರ್ಕಾರವು ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಹಿಂದಿನ ಯಾವುದೇ ಸರ್ಕಾರಗಳಿಗೂ ಈ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಸ್ಥಳೀಯ ಪೊಲೀಸರು ಪರಿಣಾಮಕಾರಿಯಾಗಿ ಪ್ರಕರಣಗಳ ತನಿಖೆ ನಡೆಸದಿರುವ ಕಾರಣಕ್ಕೆ ಶಿಕ್ಷೆ ಪ್ರಮಾಣ ಕಡಿಮೆಯಿತ್ತು. ದಲಿತರ ಜಮೀನು ಕಬಳಿಸುವುದು, ಬೆಳೆ ನಾಶಪಡಿಸಲು ಬೇರೆಯವರಿಗೆ ಯಾವುದೇ ಹಕ್ಕಿಲ್ಲ. ಸಂವಿಧಾನ ನೀಡಿರುವ ನಾಗರಿಕರ ಹಕ್ಕುಗಳ ರಕ್ಷಣೆ ಆಗಬೇಕು, ಯೋಜನೆಗಳು ನಿಗದಿತ ಫಲಾನುಭವಿಗಳಿಗೇ ದೊರೆಯಬೇಕು ಎಂಬ ದಿಸೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ.–ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ
ನ್ಯಾಯೋಚಿತ ತನಿಖೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗದಿತ ಅವಧಿಯಲ್ಲಿ ನ್ಯಾಯೋಚಿತವಾಗಿ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕಿದೆ. ಇದಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳು ಕಾರ್ಯನಿರ್ವಹಿಸಲಿವೆ.–ಡಾ.ಜಿ.ಪರಮೇಶ್ವರ, ಗೃಹ ಸಚಿವ
ಬೇರೆ ರಾಜ್ಯಗಳಲ್ಲಿ ಅಧ್ಯಯನ
ರಾಜ್ಯದಲ್ಲೂ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಐದು ರಾಜ್ಯಗಳಿಗೆ ತಂಡ ತೆರಳಿ ಅಧ್ಯಯನ ನಡೆಸಿತ್ತು. ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ದೇಶದ ಇತರೆ ರಾಜ್ಯಗಳು ಹೇಗೆ ಕಾರ್ಯನಿರ್ವಹಣೆ ಮಾಡುತ್ತಿವೆ ಎಂಬ ವರದಿ ತಯಾರಿಸಿ, ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಪೊಲೀಸ್ ಠಾಣೆ ಸ್ಥಾನಮಾನದ ನಂತರ ಡಿಸಿಆರ್‌ಇ ಘಟಕವು ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಬಲವಾದ ಸಂಸ್ಥೆಯಾಗಿ ಹೊರಹೊಮ್ಮಲಿದೆ.–ಅರುಣ್ ಚಕ್ರವರ್ತಿ, ಎಡಿಜಿಪಿ–ಡಿಸಿಆರ್‌ಇ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.