ಶುಕ್ರವಾರ, ಡಿಸೆಂಬರ್ 6, 2019
19 °C

ರೈತರಿಂದ ಸಿಇಒ ಕಚೇರಿ ಮುತ್ತಿಗೆ

Published:
Updated:
Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ನಡೆದಿರುವ ಅವ್ಯವಹಾರ, ಪ್ರಗತಿ, ಮುಂದುವರಿದ ಕಾಮಗಾರಿಗಳ ಕುರಿತು ಚರ್ಚಿಸಿ ಹೆಚ್ಚಿನ ಕಾಮಗಾರಿ ಮಾಡಿಸಬೇಕು.

ಈ ಹಿಂದಿನ ಸಿಇಓ ಅವರ ಅವಧಿಯಲ್ಲಿ ಮುಂದುವರಿದ ಕಾಮಗಾರಿ ಏನಾಯಿತು ಎನ್ನುವ ಬಗ್ಗೆ ಮಾಹಿತಿ ನೀಡಬೇಕು. ರೈತರು ಫೋನ್ ಮಾಡಿದ ಸಂದರ್ಭದಲ್ಲಿ ಕರೆ ಸ್ವೀಕರಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಚೇರಿಗೆ ಬರುವ ರೈತರನ್ನು ಹೆಚ್ಚು ಸಮಯ ಕಾಯಿಸಿ ಅವರ ಕೆಲಸಗಳಿಗೆ ತೊಂದರೆ ಮಾಡಬಾರದು.

ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಹೆಚ್ಚಿನ ಅಭಿವೃಧ್ದಿ ಕೆಲಸ ಮಾಡುವ ಮೂಲಕ ಮುಂದಿನ ಬೇಸಿಗೆಗೆ ನೀರು ಸಂಗ್ರಹಿಸಿ ಉಳಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಸಿಇಒ ಬಿ.ಎಚ್. ನಾರಾಯಣರಾವ್‌ ಮಾತನಾಡಿ, ‘ಉದ್ಯೋಗ ಖಾತರಿ ಯೋಜನೆ, ಆಶ್ರಯಮನೆ ನಿರ್ಮಾಣದಲ್ಲಿ ಅವ್ಯವಹಾರ ನಡೆಸಿರುವ ಪಿಡಿಒ ವಿರುದ್ಧ ದೂರು ನೀಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಬಳಿಕ ಪ್ರತಿಭಟನಾನಿರತರು ಪ್ರತಿಭಟನೆಯನ್ನು ವಾಪಸ್ ಪಡೆದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್, ತಾಲ್ಲೂಕು ಅಧ್ಯಕ್ಷ ಹೆಗ್ಗವಾಡಿಪುರ ಮಹದೇವಸ್ವಾಮಿ, ಕಾರ್ಯಾಧ್ಯಕ್ಷ ಹೊನ್ನೂರು ಬಸವಣ್ಣ, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಂಚಾಲಕ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಫೃಥ್ವಿ ಇದ್ದರು.

ಪ್ರತಿಕ್ರಿಯಿಸಿ (+)