ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣ: ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

ಭಾನುವಾರ, ಮೇ 26, 2019
22 °C

ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣ: ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

Published:
Updated:

ಬೆಂಗಳೂರು: ‘ಶಾಲಾ ಮಕ್ಕಳು, ಕಾರ್ಮಿಕರು, ಸಾಮಾನ್ಯ ಪ್ರಯಾಣಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಕೊಂಡೊಯ್ಯುವುದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ ಸಂಬಂಧಿಸಿದ ಇಲಾಖೆಗಳ ಮೇಲಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮೌಖಿಕ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಂಚಾಟೆ ಸಂಜೀವ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಯನ್ನು (ಪಿಐಎಲ್‌) ಹಂಗಾಮಿ ಮುಖ್ಯನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ ಅವರು, ‘ಈ ದಿಸೆಯಲ್ಲಿ ಸರ್ಕಾರ ಶೀಘ್ರವೇ ಕ್ರಿಯಾ ಯೋಜನೆ ರೂಪಿಸಲಿದೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ,‘ಕೋರ್ಟ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ವಿಚಾರಣೆಯೊಳಗೆ ಸಮಗ್ರ ಕ್ರಿಯಾ ಯೋಜನೆ ವರದಿ ಸಿದ್ಧಪಡಿಸಿ ಕೋರ್ಟ್‌ಗೆ ಸಲ್ಲಿಸಿ’ ಎಂದು ತಾಕೀತು ಮಾಡಿತು.ವಿಚಾ ರಣೆಯನ್ನು ಜೂನ್‌ 3ಕ್ಕೆ ಮುಂದೂಡಲಾಗಿದೆ.

ಪ್ರಕರಣವೇನು?: ‘ಸಾರ್ವಜನಿಕರಿಗೆ ಸುರಕ್ಷಿತ, ಸುಲಭ ಹಾಗೂ ಕೈಗೆಟಕುವ ದರದದಲ್ಲಿ ವಾಹನಗಳಲ್ಲಿ ಸಂಚರಿಸುವ ರಾಜ್ಯ ನೀತಿಯೊಂದನ್ನು ರೂಪಿಸಲು ರಸ್ತೆ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಮಕ್ಕಳ ಹಕ್ಕುಗಳು ಹಾಗೂ ಕೇಂದ್ರ ಟ್ರೇಡ್‌ ಯೂನಿಯನ್‌ಗಳ ನೆರವು ಪಡೆಯುವಂತೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

‘ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು, ಕಾರ್ಮಿಕರು, ಸಾಮಾನ್ಯ ಪ್ರಯಾಣಿಕರನ್ನು ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಇದರಿಂದ ರಾಜ್ಯದ ವಿವಿಧೆಡೆ ಸಾಕಷ್ಟು ಅಪಘಾತಗಳು ಸಂಭವಿಸಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ರೀತಿ ಪ್ರಯಾಣಿಕರನ್ನು ಬೇಕಾಬಿಟ್ಟಿ
ಯಾಗಿ ಕರೆದುಕೊಂಡು ಹೋಗುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆ. ಅಂತೆಯೇ ಮೋಟಾರು ವಾಹನ ಕಾಯ್ದೆ–1988ರ ಉಲ್ಲಂಘನೆಯೂ ಹೌದು’ ಎಂದು ಅರ್ಜಿದಾರರು ದೂರಿದ್ದಾರೆ. ಸಾರಿಗೆ ಆಯುಕ್ತ ವಿ.ಪಿ. ಇಕ್ಕೇರಿ, ಕಾರ್ಮಿಕ ಆಯುಕ್ತಪಾಲಯ್ಯ, ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು) ಎಂ.ಎ.ಸಲೀಂ ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !