ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ ಪ್ರಕರಣ| ತಪ್ಪಿತಸ್ಥರ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ - ಬಿಜೆಪಿ ಶಾಸಕರಿಂದ ಸಭಾತ್ಯಾಗ
Published 15 ಫೆಬ್ರುವರಿ 2024, 13:03 IST
Last Updated 15 ಫೆಬ್ರುವರಿ 2024, 13:03 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿ 17 ಮಂದಿಯನ್ನು ಬಂಧಿಸಲಾಗಿದ್ದು, ದುಷ್ಕೃತ್ಯಗಳಲ್ಲಿ ಶಾಮೀಲಾದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಯಾರಿಗೇ ಆಗಲಿ ಅನ್ಯಾಯವಾಗಲು ಬಿಟ್ಟಿಲ್ಲ; ಬಿಡುವುದೂ ಇಲ್ಲ’ ಎಂದರು.

ಟಿಎಂಸಿ ನಾಯಕರಿಂದ ಸಂದೇಶ್‌ಖಾಲಿ ನಿವಾಸಿಗಳ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ಈ ಹೇಳಿಕೆ ನೀಡಿದ್ದಾರೆ.

‘ಸಂದೇಶ್‌ಖಾಲಿಯಲ್ಲಿ ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ. ಅಲ್ಲಿನ ದೌರ್ಜನ್ಯ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲು ಪೊಲೀಸರ ತಂಡವನ್ನು ರಚಿಸಲಾಗಿದೆ. ರಾಜ್ಯ ಮಹಿಳಾ ಆಯೋಗದ ಸದಸ್ಯರ ತಂಡವನ್ನು ಸಹ ಅಲ್ಲಿಗೆ ಕಳುಹಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಆ ಪ್ರದೇಶದಲ್ಲಿ ಅಶಾಂತಿಯನ್ನು ಉಂಟು ಮಾಡುವ ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಆದರೆ, ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ’ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮುಂದುವರಿದ ಪ್ರತಿಭಟನೆ: ಸಂದೇಶ್‌ಖಾಲಿಯಲ್ಲಿ ಪ್ರತಿಭಟನೆ ಮುಂದುವರಿಯಿತು. ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು, ಟಿಎಂಸಿ ನಾಯಕ ಶಹಜಹಾನ್ ಶೇಖ್‌ ಹಾಗೂ ಅವರ ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯಿಸಿದರು. 

ಬಿಜೆಪಿ ಸಭಾತ್ಯಾಗ: ಕಲಾಪ ಆರಂಭವಾದಾಗ, ಸಂದೇಶ್‌ಖಾಲಿಯಲ್ಲಿ ಸ್ಥಳೀಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳನ್ನು ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ, ಮಮತಾ ಬ್ಯಾನರ್ಜಿ ಸದನದಲ್ಲಿ ಇರಲಿಲ್ಲ.

ವಿಷಯ ಪ್ರಸ್ತಾಪಿಸಿ ಮಾತನಾಡಿದ ಬಿಜೆಪಿ ಮುಖ್ಯಸಚೇತಕ ಮನೋಜ್‌ ತಿಗ್ಗಾ ಹಾಗೂ ಶಾಸಕರು, ಮುಖ್ಯಮಂತ್ರಿ ಬ್ಯಾನರ್ಜಿ ಅವರು ಈ ವಿಷಯವಾಗಿ ಹೇಳಿಕೆ ನೀಡಬೇಕು ಎಂದು ಪಟ್ಟು ಹಿಡಿದರು.

ಬಿಜೆಪಿ ಶಾಸಕರ ಬೇಡಿಕೆಗೆ ಒಪ್ಪದ ಸಭಾಧ್ಯಕ್ಷ ಬಿಮನ್‌ ಬಂದೋಪಾಧ್ಯಾಯ, ಶಿಸ್ತಿನಿಂದ ವರ್ತಿಸುವಂತೆ ಸೂಚನೆ ನೀಡಿದರು. ಇದಕ್ಕೆ ಕಿವಿಗೊಡದ ಬಿಜೆಪಿ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸದನದಿಂದ ಹೊರ ನಡೆದರು.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ತಿಗ್ಗಾ, ‘ಸಂದೇಶ್‌ಖಾಲಿಯಲ್ಲಿ ನಡೆದ ದೌರ್ಜನ್ಯದ ವಿಚಾರವಾಗಿ ಮುಖ್ಯಮಂತ್ರಿ ಯಾವುದೇ ಹೇಳಿಕೆ ನೀಡಿಲ್ಲ. ಸಂದೇಶ್‌ಖಾಲಿಯಲ್ಲಿ ಕಾನೂನು–ಸುವ್ಯವಸ್ಥೆ ಕುಸಿದು ಬಿದ್ದಿದ್ದು, ನಮಗೆ ಅಲ್ಲಿಗೆ ಹೋಗುವುದಕ್ಕೂ ಅವಕಾಶ ನೀಡುತ್ತಿಲ್ಲ. ಹೀಗಾಗಿ, ನಾವು ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ’ ಎಂದರು.

ಟಿಎಂಸಿ ಮುಖ್ಯ ಸಚೇತಕ ನಿರ್ಮಲ್‌ ಘೋಷ್‌ ಮಾತನಾಡಿ, ‘ಬಿಜೆಪಿ ರಾಜ್ಯದಲ್ಲಿರುವ ಶಾಂತಿ ವಾತಾವರಣವನ್ನು ಕೆಡಿಸಲು ಯತ್ನಿಸುತ್ತಿದೆ. ಅಧಿವೇಶನದ ಕಲಾಪಕ್ಕೂ ಅಡ್ಡಿಪಡಿಸುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT