ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲಾಗುವುದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಬುಧವಾರ) ಭರವಸೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ರ‍್ಯಾಲಿಗೆ ಚಾಲನೆ ನೀಡಿರುವ ಅವರು, 'ಇಂಡಿಯಾ' ಮೈತ್ರಿಕೂಟದ ಬೆಂಬಲದೊಂದಿಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಂಬನ್ ಜಿಲ್ಲೆಯ ಬನಿಹಾಲ್ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.
'ವಿಧಾನಸಭೆ ಚುನಾವಣೆಗೂ ಮುನ್ನವೇ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ನಾವು ಬಯಸಿದ್ದೆವು. ಆದರೆ ಅದಕ್ಕೆ ಬಿಜೆಪಿಯು ಸಿದ್ಧರಿರಲಿಲ್ಲ ಮತ್ತು ಮೊದಲು ಚುನಾವಣೆ ನಡೆಸಲು ಬಯಸಿತ್ತು' ಎಂದು ಅವರು ಹೇಳಿದ್ದಾರೆ.
'ಬಿಜೆಪಿ ಬಯಸಲಿ ಅಥವಾ ಇಲ್ಲದಿರಲಿ. ನಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದನ್ನು ಖಾತ್ರಿಪಡಿಸಲಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ 'ಇಂಡಿಯಾ' ಮೈತ್ರಿಕೂಟವು ಒತ್ತಡವನ್ನು ಹೇರಲಿದೆ' ಎಂದು ಅವರು ಹೇಳಿದ್ದಾರೆ.