ಬೆಂಗಳೂರು: 'ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣಾ ನ್ಯಾಯಾಲಯ ನಿಗದಿಪಡಿಸಿರುವ ಇದೇ 15ರ ಮುದ್ದತಿನ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು' ಎಂದು ಹೈಕೋರ್ಟ್ ನಿರ್ದೇಶಿಸಿದೆ.
ತಮ್ಮ ವಿರುದ್ಧ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು, 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಪ್ರಕರಣದ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ಅವರು, “ಅಡ್ವೊಕೇಟ್ ಜನರಲ್ ಊರಿನಲ್ಲಿ ಇಲ್ಲ. ಹೀಗಾಗಿ, ವಿಚಾರಣೆ ಮುಂದೂಡಬೇಕು” ಎಂದು ಕೋರಿದರು.
ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, 'ಪ್ರಕರಣ ಇದೇ ಮೊದಲ ಬಾರಿಗೇನೂ ವಿಚಾರಣೆಗೆ ಬರುತ್ತಿಲ್ಲ. ನಮ್ಮ ವಾದ ಆಲಿಸಲೇಬೇಕು. ಯಡಿಯೂರಪ್ಪ ವಿರುದ್ಧ ವಿಚಾರಣಾ ನ್ಯಾಯಾಲಯ ದೋಷಾರೋಪ ಪಟ್ಟಿ ಸ್ವೀಕರಿಸಿದ್ದು, ಸಂಜ್ಞೇಯ ಅಪರಾಧ ಎಂದು ಪರಿಗಣಿಸಿ ಅರ್ಜಿದಾರರ ಖುದ್ದು ಹಾಜರಿಗೆ ಆದೇಶಿಸಿದೆ. ಹೀಗಾಗಿ, ಇದೇ 15ರಂದು ಅರ್ಜಿದಾರರು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ' ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು 'ಯಡಿಯೂರಪ್ಪ ಅವರಿಗೆ ಈಗಾಗಲೇ ಮಧ್ಯಂತರ ಆದೇಶದ ಮೂಲಕ ರಕ್ಷಣೆ ಒದಗಿಸಲಾಗಿದೆ. ಹಾಗಾಗಿ, ಈ ಪ್ರಕರಣವನ್ನು ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳುವವರೆಗೆ ಪೋಕ್ಸೊ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಅವರ ಖುದ್ದು ಹಾಜರಿಗೆ ವಿನಾಯಿತಿ ನೀಡಬೇಕು' ಎಂದು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದರು.
ಸಂತ್ರಸ್ತ ಬಾಲಕಿಯ ಅಣ್ಣನ ಪರ ವಕೀಲ ಎಸ್.ಬಾಲನ್ ಹಾಜರಿದ್ದರು.
'ಯಡಿಯೂರಪ್ಪ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳು ವಿಚಾರಣೆಗೆ ಖುದ್ದು ಹಾಜರಾಗಬೇಕು' ಎಂದು ವಿಚಾರಣಾ ನ್ಯಾಯಾಲಯ ಇದೇ 6ರಂದು ಆದೇಶಿಸಿತ್ತು.