ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥದಲ್ಲಿ ಮೇಘ ಸ್ಫೋಟ: 40 ಮಂದಿ ನಾಪತ್ತೆ; 15 ಸಾವಿರ ಜನರ ರಕ್ಷಣೆ

ಅಕ್ಷರ ಗಾತ್ರ

ಶ್ರೀನಗರ:ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥದಲ್ಲಿ ಮೇಘ ಸ್ಫೋಟವಾಗಿದ್ದು, ಕನಿಷ್ಠ 22 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 15 ಸಾವಿರ ಜನರನ್ನು ರಕ್ಷಣೆ ಮಾಡಲಾಗಿದೆ ಎಂದುರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌) ಅಧಿಕಾರಿಗಳು ಹೇಳಿದ್ದಾರೆ.

ಮೇಘಸ್ಫೋಟದ ಬಳಿಕ ಭಾರಿ ಮಳೆ ಸುರಿದಿದೆ. ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ. ವೇಗವಾಗಿ ನುಗ್ಗಿದ ನೀರಿನಿಂದಾಗಿ ಡೇರೆಗಳು ಕೊಚ್ಚಿ ಹೋಗಿವೆ. ಸುಮಾರು35ಕ್ಕೂ ಹೆಚ್ಚು ಡೇರೆಗಳು ನಾಶವಾಗಿವೆ. ಮೂರು ಸಾಮೂಹಿಕ ಭೋಜನಗೃಹಗಳಿಗೆ ಹಾನಿಯಾಗಿದೆ. ಸುಮಾರು 17 ಸಾವಿರಕ್ಕೂ ಹೆಚ್ಚು ಯಾತ್ರಿಕರು ಆಗಮಿಸಿದ್ದರುಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸ್‌, ಸೇನೆ ಮತ್ತು ಇಂಡೊ–ಟಿಬೆಟ್‌ ಗಡಿ ಪೊಲೀಸ್‌ (ಐಟಿಬಿಪಿ) ಪಡೆಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಮನೋಜ್ ಸಿನ್ಹಾ ಅವರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌), ಕೇಂದ್ರ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಶಾ ಅವರು ಟ್ವೀಟ್‌ ಮಾಡಿದ್ದಾರೆ.

ತೀರ್ಥಯಾತ್ರಿಕರ 15 ಮೃತದೇಹಗಳು ದೊರೆತಿವೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.ಗಾಯಗೊಂಡವರನ್ನು ಹೆಲಿಕಾಪ್ಟರ್‌ಗಳ ಮೂಲಕ ಚಿಕಿತ್ಸೆಗೆ ರವಾನಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಾಶ್ಮೀರ ಪೊಲೀಸ್‌ ಮಹಾ ನಿರೀಕ್ಷಕ ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷ ಅಮರನಾಥ ಯಾತ್ರೆ ಸ್ಥಗಿತವಾಗಿತ್ತು. ಈ ವರ್ಷ ಜೂನ್‌ 30ರಂದು ಯಾತ್ರೆ ಆರಂಭವಾಗಿತ್ತು. ಪ್ರತಿಕೂಲ ಹವಾಮಾನದಿಂದಾಗಿ ಈ ವಾರದ ಆರಂಭದಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಈ ವರ್ಷ ಇಲ್ಲಿಯವರೆಗೂ72 ಸಾವಿರಕ್ಕೂ ಹೆಚ್ಚು ಮಂದಿ ಗುಹೆಯಲ್ಲಿ ಪೂಜೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT